
ಸುದ್ದಿ ಬೆಳಕು ವಾರ್ತೆ
ಯಾದಗಿರಿ: ಜಿಲ್ಲೆಯಲ್ಲಿ ಪಡಿತರ ಚೀಟಿದಾರರಿಗೆ ವಿತರಣೆ ಮಾಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಣೆ ಹಾಗೂ ಸಾಗಾಣಿಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀ ರಾಹುಲ್ ತುಕಾರಾಮ ಪಾಂಡ್ವೆ ಅವರು ಎಚ್ಚರಿಕೆ ನೀಡಿದ್ದಾರೆ.
ಅವರು ಇತ್ತೀಚಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ರೇಷನ್ ಅಕ್ಕಿಯನ್ನು ಕಾನೂನುಬಾಹಿರವಾಗಿ ಸಂಗ್ರಹಿಸುವ ಅಥವಾ ಸಾಗಿಸುವ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣವೇ ಅಗತ್ಯ ವಸ್ತುಗಳ ಕಾಯ್ದೆ 1955 ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಆಹಾರ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಈ ಹಿಂದೆ ನಡೆದಿರುವ ಕೆಲವು ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿಗಳು, ಸರಿಯಾದ ಮಾಹಿತಿ ಆಧರಿಸಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಣಿಕೆಯಾಗದಂತೆ ಕೂಡಲೇ ತುರ್ತು ಕ್ರಮ ಕೈಗೊಂಡು ಎಫ್.ಐ.ಆರ್. ದಾಖಲಿಸುವಂತೆ ತಾಲೂಕು ಆಹಾರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಜಿಲ್ಲೆಯಲ್ಲಿ ಪ್ರಸ್ತುತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಪ್ರಗತಿಯಲ್ಲಿದೆ. ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಜಾತಿ ಪ್ರಮಾಣ ಪತ್ರಗಳನ್ನು ನ್ಯಾಯಬೆಲೆ ಅಂಗಡಿಗಳಿಗೆ ಕೊಂಡೊಯ್ದು ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು.
ಜಿಲ್ಲೆಯಲ್ಲಿ ಇ-ಕೆವೈಸಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಇ-ಕೆವೈಸಿ ಮಾಡಿಸಿಕೊಳ್ಳದ ಫಲಾನುಭವಿಗಳು ತಕ್ಷಣವೇ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಈ ತಿಂಗಳಾಂತ್ಯದೊಳಗೆ ಜಿಲ್ಲೆಯಲ್ಲಿ ಶೇ. 100 ರಷ್ಟು ಇ-ಕೆವೈಸಿ ಪೂರ್ಣಗೊಳಿಸಲು ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಮತ್ತು ಅರ್ಹರಿಗೆ ಮಾತ್ರ ಸರ್ಕಾರದ ಸೌಲಭ್ಯಗಳು ತಲುಪುವಂತೆ ಮಾಡಲು ಈ ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.











Leave a Reply