
ಸುದ್ದಿ ಬೆಳಕು ವಾರ್ತೆ
ಯಾದಗಿರಿ : ರಾಜ್ಯದ ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್ ಕಂಪನಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ದತ್ತು ಪಡೆಯುವಂತೆ ರಾಜ್ಯ ಸರ್ಕಾರ ಮುಂದಾಗಿರುವ ಕ್ರಮವನ್ನು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಓ) ಯಾದಗಿರಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಸಮಿತಿಯು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಬದಲು ಸರ್ಕಾರಿ ಶಾಲೆಗಳನ್ನು ಖಾಸಗಿ ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ವಹಿಸುವುದು ಶಿಕ್ಷಣದ ಮೂಲ ಆಶಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದೆ.
ಸರ್ಕಾರಿ ಶಾಲೆಗಳನ್ನು ಜನರ ತೆರಿಗೆ ಹಣದಿಂದಲೇ ಸರ್ಕಾರ ಅಭಿವೃದ್ಧಿಪಡಿಸಬೇಕು. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಟ್ಟು ಮೂಲಸೌಕರ್ಯ, ಶಿಕ್ಷಕರ ನೇಮಕಾತಿ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ ಸರ್ಕಾರ ತನ್ನ ಹೊಣೆಗಾರಿಕೆಯಿಂದ ಹಿಂದೆ ಸರಿದು ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳಿಗೆ ಒಪ್ಪಿಸಲು ಮುಂದಾಗಿರುವುದು ಸಾರ್ವಜನಿಕ ಶಿಕ್ಷಣವನ್ನು ಖಾಸಗೀಕರಣಗೊಳಿಸುವ ಪ್ರಯತ್ನವಾಗಿದೆ ಎಂದು ಎಐಡಿಎಸ್ಓ ಟೀಕಿಸಿದೆ.
ಸಾರ್ವಜನಿಕ ಶಿಕ್ಷಣವನ್ನು ಲಾಭಕೋರ ಸಂಸ್ಥೆಗಳ ವಶಕ್ಕೆ ನೀಡುವಂತಹ ಯಾವುದೇ ಕ್ರಮವನ್ನು ಕೈಬಿಡಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರವೇ ಅಗತ್ಯ ಅನುದಾನ ಒದಗಿಸಿ ತನ್ನ ಸಂವಿಧಾನಬದ್ಧ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.
ರಾಜ್ಯ ಸರ್ಕಾರ ಈ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು. ಸಾರ್ವಜನಿಕ ಶಿಕ್ಷಣವನ್ನು ಉಳಿಸುವ ನಿಟ್ಟಿನಲ್ಲಿ ರಾಜ್ಯದ ಜನತೆ ಸಂಘಟಿತರಾಗಿ ಈ ಕ್ರಮವನ್ನು ವಿರೋಧಿಸಬೇಕು ಎಂದು ಎಐಡಿಎಸ್ಓ ಯಾದಗಿರಿ ಜಿಲ್ಲಾ ಸಮಿತಿ ಕರೆ ನೀಡಿದೆ.











Leave a Reply