ಗೋಟಗಿ ತಾಂಡ ಶಾಲೆಗೆ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Posted by

–

ಸುದ್ದಿ ಬೆಳಕು ವಾರ್ತೆ

ಯಾದಗಿರಿ: ತಾಲೂಕಿನ ಅರಕೇರಾ ವ್ಯಾಪ್ತಿಯ ಗೋಟಗಿ ತಾಂಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಗುರುವಾರ ರಚಿಸಲಾಯಿತು.

ಅಧ್ಯಕ್ಷರಾಗಿ ರಾಜು ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಿಬಾಯಿ ಅವಿರೋಧವಾಗಿ ಆಯ್ಕೆಯಾದರು. ಒಟ್ಟು 18 ಸದಸ್ಯರ ಸಮಿತಿ ರಚಿಸಲಾಗಿದ್ದು, 9 ಮಹಿಳೆಯರು ಹಾಗೂ 9 ಪುರುಷರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷ ರಾಜು ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ ಕೆಲಸ ಮಾಡಲಾಗುವುದು. ಶಾಲೆಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಶಿಕ್ಷಣ ಇಲಾಖೆ, ಚುನಾಯಿತ ಜನಪ್ರತಿನಿಧಿಗಳು ಹಾಗೂ ದಾನಿಗಳ ಸಹಕಾರ ಪಡೆದು ಶಾಲೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

ಮುಖ್ಯಗುರು ವೆಂಕಟೇಶ ಶೆಟ್ಟಿ ಮಾತನಾಡಿ, ಶಾಲೆಯ ಸಮಗ್ರ ಅಭಿವೃದ್ಧಿಯಲ್ಲಿ ಎಸ್‌ಡಿಎಂಸಿ ಸದಸ್ಯರ ಪಾತ್ರ ಮಹತ್ವದ್ದಾಗಿದೆ. ಸದಸ್ಯರು ಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ಗಮನಿಸಿ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಸಲಹೆ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೀಲಕಂಠ ಶಹಾಪುರಕರ್ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಬಡವರು ಹಾಗೂ ಸಾಮಾನ್ಯ ರೈತ ಕುಟುಂಬಗಳ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುತ್ತಿದ್ದು, ಅವರ ಭವಿಷ್ಯ ರೂಪಿಸುವಲ್ಲಿ ಎಸ್‌ಡಿಎಂಸಿ ಸದಸ್ಯರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಶಿಕ್ಷಕರಾದ ಗಿರಿಯ್ಯ, ಚೆನ್ನಪ್ಪ, ನಾರಾಯಣ, ಪಾಂಡು, ಚಂದ್ರು, ರಾಜು ಸೇರಿದಂತೆ ಗ್ರಾಮದ ಪೋಷಕರು ಹಾಗೂ ಪಾಲಕರು ಉಪಸ್ಥಿತರಿದ್ದರು.

You Might Also Like

Leave a Reply

Your email address will not be published. Required fields are marked *

↑
Suddi Belaku