ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ: ರಾಜ್ಯದಲ್ಲಿ ದಲಿತರು ಹಾಗೂ ಬಡ ಜನರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಸಾಮಾಜಿಕ ಬಹಿಷ್ಕಾರ ಹಾಗೂ ಹಲ್ಲೆ ಪ್ರಕರಣಗಳನ್ನು ಖಂಡಿಸಿ, ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ. ನಂ. 47/74-75) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆ ನಡೆಸಿದ ಮುಖಂಡರು, ರಾಜ್ಯದಲ್ಲಿ ದಲಿತ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಆತಂಕಕಾರಿ ಬೆಳವಣಿಗೆಯಾಗಿದ್ದು, ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಶಹಾಪುರದಲ್ಲಿ ದಲಿತರ ಮೇಲೆ ಹಲ್ಲೆ, ಬಹಿಷ್ಕಾರ ಆರೋಪ

ಮನವಿಯಲ್ಲಿ ಉಲ್ಲೇಖಿಸಿರುವಂತೆ, ಆಗಸ್ಟ್ 1ರಂದು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಹಾಪುರ (ಎಸ್.ಎಚ್.) ಗ್ರಾಮದಲ್ಲಿ ಮೃತಪಟ್ಟ ಮಹಿಳೆಯೊಬ್ಬರ ಅಂತ್ಯಸಂಸ್ಕಾರಕ್ಕೆ ಕುಣಿ ತೋಡಲು ಬರಲಿಲ್ಲ ಎಂಬ ಕಾರಣಕ್ಕೆ ದಲಿತ ಸಮುದಾಯದವರ ಮೇಲೆ ಜಾತಿ ನಿಂದನೆ, ಹಲ್ಲೆ ಹಾಗೂ ಸಾಮಾಜಿಕ ಬಹಿಷ್ಕಾರ ಹೇರಲಾಗಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಕುಡಿಯುವ ನೀರು ತರಲು ಹೋದಾಗಲೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ಸಂಘಟನೆ ತಿಳಿಸಿದೆ.

ದೇವದುರ್ಗದಲ್ಲಿ ದಲಿತ ಯುವಕನ ಕೊಲೆ ಖಂಡನೆ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದಲ್ಲಿ ಆಗಸ್ಟ್ 4ರಂದು ದಲಿತ ಯುವಕ ಭೂಮಾನಂದ (35) ಅವರ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಸಂಘಟನೆ ಆರೋಪಿಸಿದೆ. ದೇವಾಲಯ ಪ್ರವೇಶ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದ್ದನ್ನು ಸಹಿಸದೆ ಈ ಕೃತ್ಯ ಎಸಗಲಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದು, ಈ ಸಂಬಂಧ ದೇವದುರ್ಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಬೇಡಿಕೆಗಳು

ಮನವಿಯಲ್ಲಿ ಸರ್ಕಾರಕ್ಕೆ ಈ ಕೆಳಕಂಡ ಬೇಡಿಕೆಗಳನ್ನು ಸಲ್ಲಿಸಲಾಗಿದೆ:

ಶಹಾಪುರ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ಎಸಗಿ ಸಾಮಾಜಿಕ ಬಹಿಷ್ಕಾರ ಹೇರಿದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು.

ಶಹಾಪುರ ಗ್ರಾಮದ ಸಂತ್ರಸ್ತ ಕುಟುಂಬಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಸೂಕ್ತ ಪರಿಹಾರ ಒದಗಿಸಬೇಕು.

ಹದ್ದಿನಾಳ ಗ್ರಾಮದ ಕೊಲೆಯಾದ ದಲಿತ ಯುವಕ ಭೂಮಾನಂದ ಅವರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು.

ದಲಿತರು, ಬಡವರು ಹಾಗೂ ಮಹಿಳೆಯರ ಸುರಕ್ಷತೆಗೆ ಕಟ್ಟುನಿಟ್ಟಿನ ಪೊಲೀಸ್ ರಕ್ಷಣೆ ಒದಗಿಸಿ, ನಿರ್ಭಯವಾಗಿ ಬದುಕುವ ವಾತಾವರಣ ನಿರ್ಮಿಸಬೇಕು.

ಪ್ರತಿಭಟನೆ ಹಾಗೂ ಮನವಿ ಸಲ್ಲಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕರಾದ ನಿಂಗಣ್ಣ ಎಂ. ಗೋನಾಳ, ಹೆಚ್.ಆರ್. ಬಡಿಗೇರ, ತಾಲ್ಲೂಕು ಸಂಚಾಲಕರಾದ ನಾಗರಾಜ ಒಕಳಿ, ಗೋಪಾಲ ಗೋಟಿಕೇರಾ, ಭೀಮಣ್ಣ ಅಡ್ಯೊಡಗಿ, ಮಲ್ಲಪ್ಪ ಕೋಟೆ, ವಿದ್ಯಾರ್ಥಿ ಒಕ್ಕೂಟದ ಸದಾಶಿವ ದೊಡ್ಡಮನಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

Suddi Belaku