ಯಾದಗಿರಿಯಲ್ಲಿ ಪತ್ರಕರ್ತನ ಅಪಹರಣ ಆರೋಪ; ಪೊಲೀಸ್ ಸಿಬ್ಬಂದಿ ವಿರುದ್ಧ ಶಂಕೆ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ: ನಗರದ ಲುಂಬಿನಿ ಗಾರ್ಡನ್‌ ಬಳಿ ಪತ್ರಕರ್ತನೊಬ್ಬರನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಯಾದಗಿರಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಶಿಧರ ಕಾಲೊನಿ ಹೊಸಳ್ಳಿ ಕ್ರಾಸ್‌ ನಿವಾಸಿ ಹಾಗೂ ಕ್ರಾಂತಿ ಪತ್ರಿಕೆಯ ಪತ್ರಕರ್ತ ಸಾಗರ ಪ್ರೇಮಕುಮಾರ ದೇಸಾಯಿ (35) ಅಪಹರಣಕ್ಕೊಳಗಾದವರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಶನಿವಾರ ಬೆಳಿಗ್ಗೆ 11.30ರ ಸುಮಾರಿಗೆ ಮನೆಯಿಂದ ಸ್ಕೂಟಿಯಲ್ಲಿ ಹೊರಟಿದ್ದ ಸಾಗರ, 11.45ರಿಂದ 11.50ರ ನಡುವೆ ಲುಂಬಿನಿ ಗಾರ್ಡನ್‌ ಬಳಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ಮೂವರು ವ್ಯಕ್ತಿಗಳು ಸ್ಕೂಟಿಗೆ ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ಬಳಿಕ ಕಾರಿನಿಂದ ಇಳಿದವರು ಸಾಗರ ಅವರ ಮೇಲೆ ಹಲ್ಲೆಗೆ ಯತ್ನಿಸಿ, ಸ್ಕೂಟಿಯನ್ನು ಬದಿಗೆ ತಳ್ಳಿ, ಅವರನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆಯನ್ನು ಗಮನಿಸಿದ ಹೋಂ ಗಾರ್ಡ್‌ ವಿಶ್ವ ಅವರು 112 ಪೊಲೀಸ್‌ ಸೇವೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ಮಧ್ಯಾಹ್ನ ಕುಟುಂಬಸ್ಥರಿಗೆ ಮಾಹಿತಿ ಲಭ್ಯವಾಗಿದ್ದು, ಸಾಗರ ಅವರ ಸಹೋದರ ಭೀಮಾಶಂಕರ ಹಾಗೂ ಸಂಬಂಧಿಕರು ಸ್ಥಳಕ್ಕೆ ತೆರಳಿ ಸುತ್ತಮುತ್ತಲಿನ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಪೊಲೀಸರು ಕೂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಸಾಗರ ಅವರ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ.

ಪೊಲೀಸ್‌ ಸಿಬ್ಬಂದಿ ವಿರುದ್ಧ ಶಂಕೆ

ಸಾಗರ ಅವರಿಗೆ ವಿಜಯಪುರ ಜಿಲ್ಲೆಯಲ್ಲಿ ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಶ ಪೂಜಾರ ಎಂಬವರು ಪದೇಪದೇ ದೂರವಾಣಿ ಕರೆ ಮಾಡಿ ಕಿರುಕುಳ ನೀಡುತ್ತಿದ್ದರು ಎಂದು ದೂರುದಾರರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ ಪೂಜಾರ ಹಾಗೂ ಅವರ ಸಹಚರರು ಅಪಹರಣ ಕೃತ್ಯದಲ್ಲಿ ಭಾಗಿಯಾಗಿರಬಹುದೆಂಬ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಯಾದಗಿರಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಪ್ರಕರಣದ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಅಪಹರಣಕ್ಕೊಳಗಾಗಿದ್ದಾರೆ ಎನ್ನಲಾದ ಸಾಗರ ಅವರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

You Might Also Like

Leave a Reply

Your email address will not be published. Required fields are marked *

Suddi Belaku