ಆ.16ರಂದು ಯಾದಗಿರಿಯಲ್ಲಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಸಮಾರಂಭ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ (ರಿ.) ಬೆಂಗಳೂರು, ಜಿಲ್ಲಾ ಘಟಕ ಯಾದಗಿರಿ ವತಿಯಿಂದ ವಿಶೇಷ ಉಪನ್ಯಾಸ, ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆ.16ರಂದು ಬೆಳಿಗ್ಗೆ 10.30ಕ್ಕೆ ಯಾದಗಿರಿ ನಗರದ ಚಿತ್ತಾಪುರ ರಸ್ತೆಯಲ್ಲಿರುವ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ.ರವೀಂದ್ರನಾಥ ಎಸ್ ಹೊಸ್ಮನಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯ ಶಶೀಲ ಜಿ. ನಮೋಶಿ, ಮಾಜಿ ವಿಧಾನ ಪರಿಷತ್ ಸದಸ್ಯ ಶರಣಪ್ಪ ಮಟ್ಟೂರ ಉಪಸ್ಥಿತರಿರುವರು. ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ತಿಮ್ಮಯ್ಯ ಪುರ್ಲೆ ಹಾಗೂ ಸಂಘದ ರಾಜ್ಯಾಧ್ಯಕ್ಷ ನಿಂಗೇಗೌಡ ಎ.ಹೆಚ್.ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಘಟಕದ ಅಧ್ಯಕ್ಷ ಡಾ. ರವೀಂದ್ರನಾಥ ಎಸ್. ಹೊಸ್ಮನಿ ವಹಿಸಲಿದ್ದಾರೆ. ಉಪ ನಿರ್ದೇಶಕ ಸುದೀಪ್ ಟಿ.ಸಿ., ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ, ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ರುದ್ರಗೌಡ ಮಾಲಿಪಾಟೀಲ, ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಶರಣಗೌಡ ಪಾಟೀಲ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಯಪ್ಪಗೌಡ ಹುಡೇದ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಸರ್ಕಾರಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಸುಭಾಶ್ಚಂದ್ರ ಕೌಲಗಿ, ಸಂಘದ ಕಾರ್ಯದರ್ಶಿ ಭೀಮಪ್ಪ ಎಚ್. ಗೊಲ್ಲರ, ಕಲಬುರಗಿ ಜಿಲ್ಲಾಧ್ಯಕ್ಷ ಎನ್.ಬಿ. ರಂಗೋಲಿ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಕೆಂಭಾವಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಅರಳಹಳ್ಳಿ, ಪ.ಪೂ.ಕಾ.ಉ. ಸಂಘದ ಯಾದಗಿರಿ ತಾಲೂಕು ಅಧ್ಯಕ್ಷ ಸಾಬಯ್ಯ ಕವಲ್ದಾರ, ಶಹಾಪುರ ಅಧ್ಯಕ್ಷ ಬಿ‌‌.ಆರ್‌‌. ಅಂಚೆಸೂಗೂರು, ಸುರಪುರ ಅಧ್ಯಕ್ಷ ಮೋನಯ್ಯ ಗೋನಾಲ, ಗುರುಮಠಕಲ್ ಅಧ್ಯಕ್ಷ ದೇವೇಂದ್ರಪ್ಪ ಚಂಡ್ರಿಕಿ, ಹುಣಸಗಿ ಅಧ್ಯಕ್ಷ ಲಕ್ಷ್ಮಣ ರಾಠೋಡ ಹಾಗೂ ಯಾದಗಿರಿ ಜಿಲ್ಲಾ ಘಟಕದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರವೀಂದ್ರ ಗುತ್ತೇದಾರ, ಸಾಬಯ್ಯ ಕವಲ್ದಾರ, ಭೀಮಣ್ಣ ಅಂಚೆಸೂಗೂರು, ಭೀಮಾಶಂಕರ ದೊಡ್ಮನಿ ಇದ್ದರು.


ಅಕ್ಕ ಅಕಾಡೆಮಿಯ ಡಾ.ಶಿವಕುಮಾರ ಅವರಿಂದ ವಿಶೇಷ ಉಪನ್ಯಾಸ

ಬೆಂಗಳೂರಿನ ಅಕ್ಕ ಅಕಾಡೆಮಿಯ ಮುಖ್ಯಸ್ಥರಾದ ಡಾ.ಶಿವಕುಮಾರ ಅವರಿಂದ ವಿದ್ಯಾರ್ಥಿ ಹಾಗೂ ಸಮಾಜ ಎನ್ನುವ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಡಾ.ರವೀಂದ್ರನಾಥ ಹೊಸ್ಮನಿ ಸಲಹೆ‌ ನೀಡಿದರು.


೯೦ ಸಾಧಕ ವಿದ್ಯಾರ್ಥಿಗಳಿಗೆ
ಪ್ರತಿಭಾ ಪುರಸ್ಕಾರ, ಅಭಿನಂದನೆ ಸಮಾರಂಭ

2026ರ ದ್ವಿತೀಯ ಪಿಯುಸಿ ಪರೀಕ್ಷೆ–1ರಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ರ‍್ಯಾಂಕ್ ಪಡೆದ ಪ್ರತಿಭಾವಂತ ಹಾಗೂ ಸಾಧಕ 90 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ ಎಂದು ಸಂಘದ ಜಿಲ್ಲಾಧ್ಯಕ್ಷ ಡಾ.ಹೊಸ್ಮನಿ ತಿಳಿಸಿದರು.
ಇದೇ ಸಂದರ್ಭದಲ್ಲಿ 2026–31ನೇ ಅವಧಿಗೆ ಆಯ್ಕೆಯಾದ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ ನಡೆಯಲಿದೆ. ಅಲ್ಲದೆ, ವೈಯಕ್ತಿಕವಾಗಿ ಶೇ.100ರಷ್ಟು ಫಲಿತಾಂಶ ದಾಖಲಿಸುವಲ್ಲಿ ಯಶಸ್ವಿಯಾದ ಉಪನ್ಯಾಸಕರನ್ನು ಸನ್ಮಾನಿಸಿ ಗೌರವಿಸಲಾಗುವುದು.
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವುದು ಹಾಗೂ ಉತ್ತಮ ಫಲಿತಾಂಶ ನೀಡಿದ ಉಪನ್ಯಾಸಕರ ಸೇವೆಯನ್ನು ಗುರುತಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

Suddi Belaku