ಬಿ. ನಾಗೇಂದ್ರ ಮತ್ತೆ ಸಚಿವರಾಗಿರುವುದಕ್ಕೆ ಬಿಜೆಪಿ ವಿರೋಧ: ಯಾದಗಿರಿಯಲ್ಲಿ ಪ್ರತಿಭಟನೆ ಎಚ್ಚರಿಕೆ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಮುಂದುವರಿದಿರುವಾಗಲೇ ಬಿ.ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ ತಿಳಿಸಿದರು.

ನಗರದ‌ ಪತ್ರಿಕಾ ಭವನದಲ್ಲಿ‌ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ಸುಮಾರು ₹186–187 ಕೋಟಿ ಮೊತ್ತದ ಅವ್ಯವಹಾರ ನಡೆದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಕರಣದಲ್ಲಿ ಅವರ ವಿರುದ್ಧ ಆರೋಪಗಳು ಮತ್ತು ತನಿಖೆ ಮುಂದುವರಿದಿರುವಾಗ ಮತ್ತೆ ಸಚಿವರನ್ನಾಗಿ ನೇಮಿಸಿರುವುದು ಅಕ್ಷಮ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿಗಮದ ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ದುರುಪಯೋಗವಾಗಿದೆ ಎಂಬ ಆರೋಪವಿರುವ ಪ್ರಕರಣದಲ್ಲಿ ಸಂಬಂಧಪಟ್ಟ ವ್ಯಕ್ತಿಯನ್ನೇ ಮತ್ತೆ ಸಚಿವರನ್ನಾಗಿ ಮಾಡಿರುವುದು ಪರಿಶಿಷ್ಟ ಪಂಗಡದ ಜನರಿಗೆ ಮಾಡಿದ ದ್ರೋಹ ಎಂದು ಹೇಳಿದರು.

ನಿಗಮದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ, ತೆಲಂಗಾಣದಲ್ಲಿಯೂ ಖಾತೆಗಳನ್ನು ತೆರೆದು ಹಣ ಡ್ರಾ ಮಾಡಲಾಗಿದೆ ಎಂಬ ಅಂಶಗಳು ಜಾರಿ ನಿರ್ದೇಶನಾಲಯದ ತನಿಖಾ ದಾಖಲೆಗಳಲ್ಲಿ ಉಲ್ಲೇಖವಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವುದನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ನಾಗೇಂದ್ರ ಅವರಿಗೆ ಕ್ಲೀನ್‌ಚಿಟ್ ಸಿಕ್ಕಿಲ್ಲ. ತನಿಖೆ ನಡೆಯುತ್ತಿರುವಾಗಲೇ ಮತ್ತೆ ಸಚಿವ ಸ್ಥಾನ ನೀಡಿರುವುದರ ಹಿಂದೆ ಏನಾದರೂ ಒತ್ತಡವಿದೆಯೇ?’ ಎಂದು ಪ್ರಶ್ನಿಸಿದರು.

ನಾಗೇಂದ್ರ ಅವರ ರಾಜೀನಾಮೆ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಆಗ್ರಹಿಸಿರುವ ಅವರು, ರಾಜೀನಾಮೆ ಪಡೆಯುವವರೆಗೆ ಬೆಂಗಳೂರಿನಲ್ಲಿ ಸದನದ ಒಳಗೆ ಹಾಗೂ ಹೊರಗೆ ನಮ್ಮ ರಾಜ್ಯ ನಾಯಕರು ಹೋರಾಟ ನಡೆಸಿದರೇ, ನಾವು ಜಿಲ್ಲಾಧಿಕಾರಿಗಳ ಕಚೇರಿ ಎದುರು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು‌.

ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ, ಯುವ ಮುಖಂಡ ಮಹೇಶಗೌಡ ಮುದ್ನಾಳ, ದೇವೇಂದ್ರ ನಾದಾ, ಹಿರಿಯ ನಾಯಕಿ ನಾಗರತ್ನ ಕುಪ್ಪಿ, ಬಸವರಾಜ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Suddi Belaku