
ಸುದ್ದಿ ಬೆಳಕು ವಾರ್ತೆ
ಶಹಾಪುರ (ಯಾದಗಿರಿ): ಹೊಲದಲ್ಲಿ ಹತ್ತಿ ಕಳೆ ಕೀಳುವ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೊ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ, ಮೂವರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿ, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಭಾನುವಾರ ತಾಲೂಕಿನ ಮಡ್ನಾಳ್ ಗ್ರಾಮದ ಬಳಿ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟ ದರ್ದೈವಿಗಳನ್ನು ಭಾಗ್ಯಶ್ರೀ (೩೫), ಸತ್ಯಮ್ಮ (೩೦) ಹಾಗೂ ಹೊನ್ನಿಂಗಮ್ಮ (೧೮) ಎಂದು ಗುರುತಿಸಲಾಗಿದೆ.

ಕೆಲಸ ಮುಗಿಸಿ ಮನೆಗೆ ಮರಳುವಾಗ ದುರಂತ:
ಕಾರ್ಮಿಕರು ಬೆಳಗಿನ ಜಾವವೇ ಮಡ್ನಾಳ್ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ಹತ್ತಿ ಕಳೆ (ಕಸ) ತೆಗೆಯುವ ಕೃಷಿ ಕೂಲಿ ಕೆಲಸಕ್ಕಾಗಿ ತೆರಳಿದ್ದರು. ದಿನವಿಡೀ ದುಡಿದು ಸಂಜೆ ಬೊಲೆರೊ ವಾಹನದಲ್ಲಿ ತಮ್ಮ ಊರಿಗೆ ವಾಪಸ್ ಆಗುತ್ತಿದ್ದ ವೇಳೆ, ಮಡ್ನಾಳ್ ಸಮೀಪ ವಾಹನವು ಚಾಲಕನ ನಿಯಂತ್ರಣ ಕಳೆದುಕೊಂಡು ವೇಗವಾಗಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ವಾಹನ ಜಖಂಗೊಂಡಿದ್ದು, ವಾಹನದಲ್ಲಿದ್ದ ಮೂವರು ಮಹಿಳೆಯರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆಯಲ್ಲಿ ವಾಹನದಲ್ಲಿದ್ದ ಇತರ ಎಂಟು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಹಾಗೂ ಪೊಲೀಸರ ನೆರವಿನಿಂದ ಗಾಯಾಳುಗಳನ್ನು ತಕ್ಷಣವೇ ಶಹಾಪುರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಭೀಮರಾಯನಗುಡಿ (ಭೀ.ಗುಡಿ) ಪೊಲೀಸ್ ಠಾಣೆಯ ಪಿಎಸ್ಐ ದೇವಿಂದ್ರರೆಡ್ಡಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಶವಪರೀಕ್ಷೆಗೆ ರವಾನಿಸಲಾಗಿದ್ದು, ಈ ಸಂಬಂಧ ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.












Leave a Reply