ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಪ್ರಕಾಶ್ ರೈ

Posted by

–

ಸುದ್ದಿ ಬೆಳಕು ವಾರ್ತೆ

ಶಹಾಪುರ : ಅರ್ಹ ಮತದಾರರ ಹೆಸರುಗಳನ್ನು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಕೈಬಿಡಬಾರದು. ಮತದಾನದ ಹಕ್ಕಿನ ರಕ್ಷಣೆಗೆ ಎಲ್ಲರೂ ಜಾಗೃತರಾಗಬೇಕು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಕರೆ ನೀಡಿದರು.

ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ‘ಎಸ್‌ಐಆರ್ ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’ದ ಸಂದರ್ಭದಲ್ಲಿ ಮಾತನಾಡಿದ ಅವರು, ಎಸ್‌ಐಆರ್ (ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆ ಕರ್ನಾಟಕದಲ್ಲಿ ಹಲವು ಪರಿಣಾಮಗಳನ್ನು ಉಂಟುಮಾಡಿದೆ ಎಂದು ಹೇಳಿದರು.

‘ಇದು ನನ್ನೊಬ್ಬರ ಮತದ ಪ್ರಶ್ನೆಯಲ್ಲ. ಎಸ್‌ಐಆರ್ ದೊಡ್ಡ ವಿಷಯವಾಗಿದ್ದು, ನಾಗರಿಕ ಸಮಾಜ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಉಳಿಯುವಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ’ ಎಂದರು.

ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮತದಾನದ ಹಕ್ಕಿನ ರಕ್ಷಣೆಯ ನಿಟ್ಟಿನಲ್ಲಿ ಹೋರಾಟ ಮುಂದುವರಿಸಲಾಗುವುದು ಎಂದು ಹೇಳಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ದೇಶದಲ್ಲಿ ಪ್ರತಿಯೊಬ್ಬರಿಗೂ ಒಂದೇ ಮತದಾನದ ಹಕ್ಕಿದೆ. ಶ್ರೀಮಂತರಿಗೂ ಒಂದೇ ಮತ, ಸಾಮಾನ್ಯ ನಾಗರಿಕನಿಗೂ ಒಂದೇ ಮತ. ಸಂವಿಧಾನ ಎಲ್ಲರನ್ನೂ ಸಮಾನವಾಗಿ ಕಾಣುತ್ತದೆ. ಹೀಗಾಗಿ ಮತದಾನದ ಹಕ್ಕಿನ ರಕ್ಷಣೆಗೆ ಜನರು ಜಾಗೃತರಾಗಬೇಕು ಎಂದು ತಿಳಿಸಿದರು.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬಡವರು, ದಲಿತರು, ಅಲೆಮಾರಿಗಳು, ಸಣ್ಣ ಸಮುದಾಯಗಳು ಹಾಗೂ ಮಧ್ಯಮ ವರ್ಗದ ಜನರು ಸಮಸ್ಯೆ ಎದುರಿಸುವ ಸಾಧ್ಯತೆ ಇದೆ. ಹೀಗಾಗಿ ಸಂತ್ರಸ್ತರಿಂದ ಅಗತ್ಯ ದಾಖಲೆಗಳನ್ನು ಪಡೆದು ಸಮಸ್ಯೆಗಳನ್ನು ದಾಖಲಿಸುವ ಕಾರ್ಯ ನಡೆಯಬೇಕು ಎಂದರು.

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅಂಶಗಳು ಹಾಗೂ ಅದರ ಪರಿಣಾಮಗಳನ್ನು ಪರಿಶೀಲಿಸುವ ಉದ್ದೇಶದಿಂದ ರಾಜ್ಯದ ಆಯ್ದ 100 ಬೂತ್‌ಗಳಲ್ಲಿ ‘ನಾಗರಿಕ ಮತಕಾವಲು ಸಮಿತಿ’ಗಳ ಮೂಲಕ ಮತ ಪರಿಶೋಧನಾ ಕಾರ್ಯ ನಡೆಸಲಾಗುತ್ತಿದೆ ಎಂದು ಹೋರಾಟಗಾರರು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಲ್. ಅಶೋಕ್, ಕೋಟ್ಯಂತರ ಜನರ ಸಮಸ್ಯೆಗಳನ್ನು ಆಲಿಸಲು ಪ್ರಕಾಶ್ ರೈ ಅವರು ತಮ್ಮ ಸಮಯವನ್ನು ಮೀಸಲಿಟ್ಟಿದ್ದಾರೆ. ಸಿನಿಮಾ ಕ್ಷೇತ್ರದ ಜತೆಗೆ ಸಾಮಾಜಿಕ ಕಾಳಜಿಯೊಂದಿಗೆ ಜನರ ಪರವಾಗಿ ಧ್ವನಿ ಎತ್ತುತ್ತಿದ್ದಾರೆ ಎಂದರು.

ಕರ್ನಾಟಕದ ಜನರು ಎಸ್‌ಐಆರ್ ಕುರಿತು ಜಾಗೃತರಾಗಬೇಕು. ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಶರಣ–ಸಂತರ ಸಮಾನತೆಯ ಆಶಯಗಳನ್ನು ಉಳಿಸುವ ನಿಟ್ಟಿನಲ್ಲಿ ಜನವಿರೋಧಿ ನೀತಿಗಳ ವಿರುದ್ಧ ಪ್ರಜಾಸತ್ತಾತ್ಮಕ ಪ್ರತಿರೋಧ ಕಟ್ಟಬೇಕು ಎಂದು ಹೇಳಿದರು.

ಲಿಂಗತ್ವ ಅಲ್ಪಸಂಖ್ಯಾತರ ಪರವಾಗಿ ಮಾತನಾಡಿದ ಮಾಯಾ ಎಸ್.ಆರ್. ನಾಯಕ್, ವಿವಿಧ ಧರ್ಮ, ಜಾತಿ ಹಾಗೂ ಸಾಮಾಜಿಕ ಹಿನ್ನೆಲೆಯ ಲಿಂಗತ್ವ ಅಲ್ಪಸಂಖ್ಯಾತರು ತಮ್ಮದೇ ಆದ ಸಾಮಾಜಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಮುದಾಯಗಳು ಎಸ್‌ಐಆರ್ ಪ್ರಕ್ರಿಯೆಯಿಂದ ಹೊರಗುಳಿಯದಂತೆ ಕ್ರಮ ವಹಿಸಬೇಕು ಎಂದರು.

‘ನಾವು ಈ ದೇಶದ ಪ್ರಜೆಗಳಲ್ಲವೇ? ನಮ್ಮ ಮತದಾನದ ಹಕ್ಕು ಹಾಗೂ ನಾಗರಿಕ ಹಕ್ಕುಗಳನ್ನು ರಕ್ಷಿಸುವ ಜವಾಬ್ದಾರಿ ಸರ್ಕಾರ ಮತ್ತು ಚುನಾವಣಾ ವ್ಯವಸ್ಥೆಯ ಮೇಲಿದೆ’ ಎಂದು ಪ್ರಶ್ನಿಸಿದರು.

ಎಸ್‌ಐಆರ್ ಕುರಿತು ಸೆ.30ರಂದು ದಾಖಲೆಗಳ ಸಮೇತ ಸುದ್ದಿಗೋಷ್ಠಿ ನಡೆಸಿ ಹಲವು ಅಂಶಗಳನ್ನು ಸಾರ್ವಜನಿಕರ ಮುಂದಿಡಲಾಗುವುದು ಎಂದು ಹೋರಾಟಗಾರರು ತಿಳಿಸಿದರು.

ಈ ಸಂದರ್ಭದಲ್ಲಿ ವಕೀಲ ಚೆನ್ನಬಸವ, ಮಲ್ಲಿಕಾರ್ಜುನ ಪೂಜಾರಿ, ಚೆನ್ನಪ್ಪ ಆನೆಗುಂದಿ, ಗಿರಿಯಪ್ಪಗೌಡ ಬಾಣತಿಹಾಳ, ಮರೇಪ್ಪ ಪ್ಯಾಟಿ, ಮಲ್ಲಿಕಾರ್ಜುನ ಸತ್ಯಂಪೇಟೆ, ಶ್ರೀಶೈಲ ಹೊಸ್ಮನಿ, ನಾಗಣ್ಣ ಬಡೀಗೇರ್, ಶಿವಪುತ್ರ ಜವಳಿ, ಸೈಯದ್ ಖಾಲಿದ್, ಶಿವಕುಮಾರ ತಳವಾರ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಸಾಮಾಜಿಕ ಹೋರಾಟಗಾರರು, ವಿದ್ಯಾರ್ಥಿಗಳು ಹಾಗೂ ನಾಗರಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

↑
Suddi Belaku