ರೈತರ ಖಾತೆಗೆ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ಜಮೆ ಮಾಡಿ: ರೈತ ಸಂಘ ಒತ್ತಾಯ

Posted by

–

ಸುದ್ದಿ ಬೆಳಕು ವಾರ್ತೆ

ಯಾದಗಿರಿ: ಜಿಲ್ಲೆಯಲ್ಲಿ ಬರಗಾಲ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ರೈತರ ಖಾತೆಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರವನ್ನು ತಕ್ಷಣ ಜಮೆ ಮಾಡಬೇಕು. ಬೆಳೆ ವಿಮೆ ಹಾಗೂ ಇನ್ಶುರೆನ್ಸ್‌ ಮೊತ್ತವನ್ನು ವಿಳಂಬವಿಲ್ಲದೆ ಪಾವತಿಸಬೇಕು. ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ವೆಂಕೋಬ ಕಟ್ಟಿಮನಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಈ ಕುರಿತು ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಯಾದಗಿರಿ ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದೆ ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬರಗಾಲ ಘೋಷಣೆ ಕೇವಲ ಕಾಗದಕ್ಕೆ ಸೀಮಿತವಾಗದೆ, ಅದರ ಸೌಲಭ್ಯಗಳು ನಿಜವಾಗಿ ರೈತರಿಗೆ ತಲುಪಬೇಕು. ಸರ್ಕಾರ ಕೂಡಲೇ ಪರಿಹಾರ ಹಣವನ್ನು ರೈತರ ಖಾತೆಗಳಿಗೆ ಜಮೆ ಮಾಡಬೇಕು ಎಂದು ಒತ್ತಾಯಿಸಿದರು.

ಅಲ್ಪ ಪ್ರಮಾಣದಲ್ಲಿ ಹತ್ತಿ ಬೆಳೆದಿರುವ ರೈತರಿಗೆ ಅನುಕೂಲವಾಗುವಂತೆ ಸರ್ಕಾರ ತಕ್ಷಣ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಹತ್ತಿಗೆ ಕನಿಷ್ಠ ₹15 ಸಾವಿರ ಬೆಂಬಲ ಬೆಲೆ ನಿಗದಿಪಡಿಸಿ ಖರೀದಿ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಸಮರ್ಪಕವಾಗಿ ಕೆಲಸ ನೀಡಬೇಕು. ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.

ಸಂಘದ ಜಿಲ್ಲಾ ಅಧ್ಯಕ್ಷ ಹಣಮಂತ್ರಾಯಗೌಡ ಪರಸನಹಳ್ಳಿ ಅವರ ನೇತೃತ್ವದಲ್ಲಿ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಗಮನ ಸೆಳೆಯಲಾಗುವುದು. ರೈತರ ಖಾತೆಗೆ ಪರಿಹಾರ ಹಣವನ್ನು ತಕ್ಷಣ ಜಮೆ ಮಾಡದಿದ್ದರೆ, ಮುಂದಿನ ದಿನಗಳಲ್ಲಿ ವಾಸುದೇವ ಮೇಟಿ ಬಣದ ವತಿಯಿಂದ ಜಿಲ್ಲೆಯಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ತಾಯಪ್ಪ ದಂಡನೂರು, ರಾಮಸಮುದ್ರ,ಯಾದಗಿರಿ ತಾಲೂಕು ಅಧ್ಯಕ್ಷ ದೇವಿಂದ್ರ ಹೊಸಮನಿ, ಇದ್ದರು.

Leave a Reply

Your email address will not be published. Required fields are marked *

↑
Suddi Belaku