ಪ್ರಾಚೀನ ಸ್ಮಾರಕಗಳನ್ನು ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ: ಬಾಬುರಾವ್ ಕಾಡ್ಲುರ್

Posted by

–

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ಜಗತ್ತನ್ನು ಅರಿಯಲು ಹಾಗೂ ಜ್ಞಾನವನ್ನು ಪಡೆಯಲು ಪ್ರವಾಸ ಉತ್ತಮ ಮಾರ್ಗವಾಗಿದೆ. ಪ್ರಾಚೀನ ಭವ್ಯ ಕುರುಹುಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲುರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಯಾದಗಿರಿ ಜಿಲ್ಲೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಭಾನುವಾರ ನಗರದ ಲುಂಬಿನಿ ವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಾಚೀನ ಇತಿಹಾಸ ಸಾರುವ ಸ್ಮಾರಕಗಳು, ಕೋಟೆ ಹಾಗೂ ಕೊತ್ತಲುಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಅಗತ್ಯವಾಗಿದೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಪ್ರಾಚೀನ ಸ್ಮಾರಕಗಳನ್ನು ನಾಶಪಡಿಸುವುದು, ವಿರೂಪಗೊಳಿಸುವುದು ಹಾಗೂ ಸ್ವಚ್ಛತೆ ಕಾಪಾಡದಿರುವುದು ಸರಿಯಲ್ಲ. ಪ್ರತಿಯೊಂದು ಪ್ರವಾಸಿ ತಾಣವನ್ನು ಸಂರಕ್ಷಿಸಿ ಅಭಿವೃದ್ಧಿಪಡಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಯಾದಗಿರಿ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ನಿರ್ಮಿಸಲು ನಾಗರಿಕರು ಸಹಕರಿಸಬೇಕು. ಪ್ರವಾಸಿ ತಾಣಗಳ ಸೌಂದರ್ಯ ಹಾಗೂ ಪರಿಸರವನ್ನು ಕಾಪಾಡುವ ಮೂಲಕ ಪ್ರವಾಸೋದ್ಯಮದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಮಾಂಡೆಂಟ್‌ (ಹೋಮ್‌ಗಾರ್ಡ್‌) ಈರಣ್ಣ, ಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಶಿರಸಗಿ, ಚಿತ್ರಕಲಾವಿದ ಮೇಘನಾಥ್ ಬೆಳ್ಳಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಮಚಂದ್ರ ಕಟ್ಟಿಮನಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ಪ್ರವಾಸಿ ಮಿತ್ರರನ್ನು ಗೌರವಿಸಲಾಯಿತು. ಆರ್ಯಭಟ್ಟ ಶಾಲೆಯ ವಿದ್ಯಾರ್ಥಿಗಳ ನೃತ್ಯ ಪ್ರದರ್ಶನ ಗಮನ ಸೆಳೆಯಿತು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ರಾಯಚೂರಿನ ಮಹಾಲಕ್ಷ್ಮಿ ಹಾಗೂ ತಂಡ ಪ್ರಾರ್ಥನೆ ಸಲ್ಲಿಸಿದರು. ಗುರುಪ್ರಸಾದ್ ವೈದ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply

Your email address will not be published. Required fields are marked *

↑
Suddi Belaku