ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

Posted by

–

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ತಾಲೂಕಿನ ಕಡೇಚೂರು–ಬಾಡಿಯಾಳ ಕೈಗಾರಿಕಾ ವಸಾಹತು ವ್ಯಾಪ್ತಿಯ ಮೆ// ಮದರ್ ಅರ್ಥ್ ಪ್ರೈವೇಟ್ ಲಿಮಿಟೆಡ್ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಕಾರ್ಮಿಕ ದೀಪಕ ತಾಪಾ ಅವರು ಮೃತಪಟ್ಟ ಪ್ರಕರಣ ಇದೀಗ ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಸಾವಿನ ನೈಜ ಕಾರಣ ಬಹಿರಂಗಪಡಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ವಿಶ್ವಾರಾಧ್ಯ ದಿಮ್ಮೆ ಆಗ್ರಹಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಅವರು, 2025ರ ಡಿಸೆಂಬರ್ 22ರಂದು ಕೆಲಸದಲ್ಲಿ ನಿರತರಾಗಿದ್ದ ದೀಪಕ ತಾಪಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಕಂಪನಿಯವರು ತಿಳಿಸಿದ್ದರು. ಆದರೆ, ಯಾವುದೇ ಮರಣೋತ್ತರ ಪರೀಕ್ಷೆ ನಡೆಸದೆ ತರಾತುರಿಯಲ್ಲಿ ರಾತ್ರಿ ವೇಳೆಯೇ ಯಾದಗಿರಿಯ ಭೀಮಾನದಿ ಬಳಿಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ ಎಂಬುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಸಂಘಟನೆಯ ಪದಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಮೃತ ಕಾರ್ಮಿಕನ ಬಾಯಿಯಿಂದ ನೊರೆ ಬರುತ್ತಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹೀಗಾಗಿ ಸಾವಿನ ಕಾರಣದ ಬಗ್ಗೆ ಸಮಗ್ರ ತನಿಖೆ ನಡೆಸುವ ಅಗತ್ಯವಿದೆ. ಕೇವಲ ಕಂಪನಿಯವರು ನೀಡಿದ ಮಾಹಿತಿಯ ಆಧಾರದ ಮೇಲೆ ಪ್ರಕರಣವನ್ನು ಮುಕ್ತಾಯಗೊಳಿಸುವ ಬದಲು, ವೈಜ್ಞಾನಿಕವಾಗಿ ಸಾವಿನ ಕಾರಣವನ್ನು ಖಚಿತಪಡಿಸಿಕೊಳ್ಳಬೇಕು ಎಂದು ದಿಮ್ಮೆ ಒತ್ತಾಯಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಮಾನವ ಹಕ್ಕುಗಳ ಆಯೋಗದ ಸದಸ್ಯರೊಬ್ಬರು ಬೆಂಗಳೂರಿನ ಕಾರ್ಖಾನೆಗಳು, ಬಾಯ್ಲರ್‌ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯ ನಿರ್ದೇಶಕರಿಗೆ ಹಾಗೂ ಕಲಬುರಗಿಯ ಸಹಾಯಕ ನಿರ್ದೇಶಕರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ. ಆದರೂ ಇದುವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬುದು ಗಂಭೀರ ಪ್ರಶ್ನೆ ಮೂಡಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಮೃತ ಕಾರ್ಮಿಕನ ಸಾವಿನ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಹಾಗೂ ಸಂಬಂಧಪಟ್ಟ ಕಂಪನಿಯ ಜವಾಬ್ದಾರಿಯುತ ಅಧಿಕಾರಿಗಳ ಪಾತ್ರ ಸೇರಿದಂತೆ ಎಲ್ಲ ಆಯಾಮಗಳಲ್ಲೂ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಅಗತ್ಯವಿದ್ದಲ್ಲಿ ಕಾನೂನುಬದ್ಧ ಪ್ರಕ್ರಿಯೆ ಅನುಸರಿಸಿ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಬೇಕು. ತನಿಖೆಯಿಂದ ಸಾವಿನ ನಿಜವಾದ ಕಾರಣ ಬೆಳಕಿಗೆ ಬರಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಪ್ರಕರಣದಲ್ಲಿ ಯಾವುದೇ ಲೋಪವಾಗಿದ್ದರೂ ಅಥವಾ ಯಾರಾದರೂ ಪ್ರಭಾವ ಬೀರುವ ಪ್ರಯತ್ನ ನಡೆಸಿದ್ದರೂ ಅದನ್ನು ತನಿಖೆಯ ವ್ಯಾಪ್ತಿಗೆ ತರಬೇಕು. ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಂಡು ಮೃತ ಕಾರ್ಮಿಕನ ಕುಟುಂಬಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಮುಂದಾಗಬೇಕು. ಇಲ್ಲವಾದಲ್ಲಿ ಸಂಘಟನೆಯ ವತಿಯಿಂದ ಉಗ್ರ ಹೋರಾಟ ರೂಪಿಸಲಾಗುವುದು ಎಂದು ವಿಶ್ವಾರಾಧ್ಯ ದಿಮ್ಮೆ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

↑
Suddi Belaku