
ಯಾದಗಿರಿ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕಂಡಿದ್ದ ಸಮಾನತೆಯ ಕನಸನ್ನು ನನಸಾಗಿಸುವ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರೂ ಬದ್ಧರಾಗಬೇಕು ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಯಾದಗಿರಿ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರು ಸಮಾನತೆಯ ಸಂದೇಶ ನೀಡಿದ ಮಹಾನ್ ನಾಯಕರು. ಅವರ ತತ್ವಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಸಮಾನತೆಗಾಗಿ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು. ಅಂಬೇಡ್ಕರ್ ಅವರು ತಮ್ಮ ಬಾಲ್ಯದಲ್ಲಿ ಅನುಭವಿಸಿದ ಅಸಮಾನತೆಯನ್ನು ನಿವಾರಿಸಲು ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಮೂಲಕ ಸಮಾಜ ಪರಿವರ್ತನೆಗೆ ಕಾರಣರಾದ ಮಹಾನ್ ವ್ಯಕ್ತಿ ಎಂದರು.
ಭಾರತದ ವೈವಿಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಅವರು ರಚಿಸಿದ ಸಂವಿಧಾನವು ಎಲ್ಲಾ ವರ್ಗಗಳಿಗೂ ನ್ಯಾಯ ಒದಗಿಸಿದೆ. ಸಂವಿಧಾನವು ಎಲ್ಲ ಸಮುದಾಯಗಳ ಹಕ್ಕುಗಳನ್ನು ಕಾಯುವ ಮಹಾಗ್ರಂಥವಾಗಿದ್ದು, ದೇಶದ ಪ್ರಗತಿಗೆ ದಿಕ್ಕು ತೋರಿಸಿದೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371(ಜೆ) ಅಡಿಯಲ್ಲಿ ಶಿಕ್ಷಣ ಮತ್ತು ಉದ್ಯೋಗಾವಕಾಶಗಳು ಲಭ್ಯವಾಗಲು ಸಂವಿಧಾನ ತಿದ್ದುಪಡಿ ಕಾರಣವಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಮಾತನಾಡಿ, ಅಂಬೇಡ್ಕರ್ ಅವರ ಜೀವನವೇ ಸಮಾನತೆಗಾಗಿ ಹೋರಾಟದ ಸಂಕೇತವಾಗಿದ್ದು, ಅವರ ತತ್ವಗಳನ್ನು ಯುವಪೀಳಿಗೆಗೆ ತಿಳಿಸುವುದು ಅಗತ್ಯ ಎಂದರು.
ಕಲಬುರಗಿಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ ಕಟ್ಟಿಮನಿ ಉಪನ್ಯಾಸ ನೀಡಿ, ಅಂಬೇಡ್ಕರ್ ಅವರನ್ನು ಆಧುನಿಕ ಭಾರತದ ಪಿತಾಮಹ ಎಂದು ಕೊಂಡಾಡಿ, ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.
ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳಿಗೆ ಬಾಲ್ಯದಿಂದಲೇ ಅಂಬೇಡ್ಕರ್ ಅವರ ಆದರ್ಶಗಳನ್ನು ತಿಳಿಸಿ, ಸುಶಿಕ್ಷಿತರನ್ನಾಗಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಿವಿಲ್ ಜಡ್ಜ್ ಆಗಿ ಆಯ್ಕೆಯಾದ ನಿವೇದಿತಾ ಹುಲಿಮನಿ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಅಪರ್ ಜಿಲ್ಲಾಧಿಕಾರಿ ರಮೇಶ್ ಕೋಲಾರ, ಸಹಾಯಕ ಆಯುಕ್ತ ಶ್ರೀಧರ್ ಗೋಟೂರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ನಗರದಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.










Leave a Reply