ಗುರುಮಠಕಲ್: ಮಾಜಿ ಶಾಸಕ ವೀರಬಸವಂತರೆಡ್ಡಿ ಮುದ್ನಾಳ ಅವರ ಅಳಿಯ ಬಿ.ಎಸ್. ವೀರಾರೆಡ್ಡಿ ಕಾಂಗ್ರೆಸ್ ಸೇರ್ಪಡೆ

Posted by

–

ಸುದ್ದಿ ಬೆಳಕು ವಾರ್ತೆ

ಗುರುಮಠಕಲ್ : ಯಾದಗಿರಿ ಮಾಜಿ ಶಾಸಕ ದಿ. ಡಾ. ವೀರಬಸವಂತರೆಡ್ಡಿ ಮುದ್ನಾಳ ಅವರ ಅಳಿಯ ಬಿ.ಎಸ್. ವೀರಾರೆಡ್ಡಿ ಮುದ್ನಾಳ ಅವರು ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್, ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಹಾಗೂ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಅವರ ಸಮ್ಮುಖದಲ್ಲಿ ವೀರಾರೆಡ್ಡಿ ಮುದ್ನಾಳ ಅವರು ಕಾಂಗ್ರೆಸ್ ಪಕ್ಷ ಸೇರಿದರು.

ಬಳಿಕ ಗುರುಮಠಕಲ್ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಈ ಭಾಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಮ್ಮ ಭಾಗದ ಜನರಿಗೆ ಅಗತ್ಯವಿರುವ ಸೌಲಭ್ಯಗಳನ್ನು ತಲುಪಿಸಲು ಪಕ್ಷದ ನಾಯಕರೊಂದಿಗೆ ಸಮನ್ವಯ ಸಾಧಿಸಿ, ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಸ್ಥಳೀಯರೆಲ್ಲರೂ ಒಗ್ಗೂಡಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಶ್ರಮಿಸುತ್ತೇವೆ ಎಂದರು.

ಇದೀಗ ಸಕ್ರಿಯ ರಾಜಕೀಯಕ್ಕೆ ಕಾಲಿಟ್ಟಿದ್ದು, ಪಕ್ಷದ ಹಾಗೂ ಹಿರಿಯರ ಆಶಯದಂತೆ ಕೆಲಸ ಮಾಡುತ್ತೇನೆ. ಪಕ್ಷ ನೀಡುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸುರಪುರ ಶಾಸಕರಾದ ರಾಜಾ ವೇಣುಗೋಪಾಲ ನಾಯಕ, ರಾಜ್ಯ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾದ ಬಾಬುರಾವ ಚಿಂಚನಸೂರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪೂರ, ಕೆಪಿಸಿಸಿ ಸದಸ್ಯ ಶರಣಪ್ಪ ಮಾನೇಗಾರ, ಗುರುಮಿಠಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾ ಚಪೇಟ್ಲಾ, ಮುಖಂಡರಾದ ಸಾಯಿಬಣ್ಣ ಬೋರಬಂಡ, ಬಾಲಪ್ಪ ನೀರಟ್ಟಿ, ಬಸವರಾಜ ದಳಪತಿ, ಕಾಶಪ್ಪ ಚಿನ್ನಾಕಾರ, ಶರಣಪ್ಪ ಮೋಟ್ನಳ್ಳಿ, ಅಮೀರ್ ಅಲಿ ಸಾಹುಕಾರ, ಗುಂಡಪ್ಪ ಇಟಕಾಲ್, ಶಿವಾನಂದ ದೇವರಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

↑
Suddi Belaku