ಸ್ಟಿಂಗ್ ಆಪರೇಷನ್‌ಗಳ ಸತ್ಯಾಸತ್ಯತೆ ಬಹಿರಂಗಕ್ಕೆ ಸಿಬಿಐ ತನಿಖೆ ಅಗತ್ಯ: ಛಲವಾದಿ ನಾರಾಯಣಸ್ವಾಮಿ

Posted by

–

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ರಾಜ್ಯದಲ್ಲಿ ಚರ್ಚೆಯಲ್ಲಿರುವ ಸ್ಟಿಂಗ್ ಆಪರೇಷನ್‌ಗಳ ಹಿಂದಿನ ಸತ್ಯಾಸತ್ಯತೆ ಬಹಿರಂಗಪಡಿಸಲು ಸಿಬಿಐ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಹಾರ, ಮೀಸಲಾತಿ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ವಿವಿಧ ವಿಚಾರಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಸ್ಟಿಂಗ್ ಆಪರೇಷನ್‌ಗಳ ಕುರಿತು ಪ್ರಸ್ತಾಪಿಸಿರುವುದರಿಂದ, ಅದರ ಹಿಂದಿರುವವರ ಉದ್ದೇಶವೇನು ಎಂಬುದು ತನಿಖೆಯಿಂದ ಬಹಿರಂಗವಾಗಬೇಕು. ಕಾರ್ಯಾಚರಣೆಗಳ ಹಿಂದೆ ಬ್ಲ್ಯಾಕ್‌ಮೇಲ್ ತಂತ್ರವಿದೆಯೇ ಅಥವಾ ಆರೋಪಗಳಲ್ಲಿ ಸತ್ಯಾಂಶವಿದೆಯೇ ಎಂಬುದನ್ನು ಸ್ವತಂತ್ರ ತನಿಖೆಯಿಂದ ತಿಳಿಯಬೇಕು ಎಂದು ಹೇಳಿದರು.

ರೈತರಿಗೆ ಪರಿಹಾರ ನೀಡಿ
ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ಮೊದಲ ಹಂತದಲ್ಲಿ ₹10 ಸಾವಿರ ಬಿಡುಗಡೆ ಮಾಡಿ, ಉಳಿದ ಮೊತ್ತವನ್ನು ಒದಗಿಸಲು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರ ಘೋಷಿಸಿರುವ ಪರಿಹಾರ ರೈತರ ಖಾತೆಗಳಿಗೆ ತಲುಪಿಲ್ಲ ಎಂದು ಆರೋಪಿಸಿದ ಅವರು, ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಡಿ ಲಭ್ಯವಿರುವ ಅನುದಾನ ಬಳಸಿ ತಕ್ಷಣ ನೆರವು ನೀಡಬೇಕು ಎಂದರು.
ನೀರಿನ ಸಮಸ್ಯೆ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹1 ಕೋಟಿ ಬಿಡುಗಡೆ ಮಾಡಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ, ಅನುದಾನ ತಲುಪಿಲ್ಲ ಎಂಬ ದೂರುಗಳಿವೆ. ವಿಶ್ವವಿದ್ಯಾಲಯಗಳ ಖಾತೆಯಲ್ಲಿರುವ ಹಣವನ್ನು ಸರ್ಕಾರಕ್ಕೆ ನೀಡುವಂತೆ ಕೇಳುತ್ತಿರುವುದಕ್ಕೂ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ಎಸ್‌ಐಆರ್‌ ಪ್ರಕ್ರಿಯೆಗೆ ವಿರೋಧ ಸಲ್ಲದು
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ರಾಜಕೀಯಗೊಳಿಸಬಾರದು. ಪಟ್ಟಿಯಲ್ಲಿರುವ ಲೋಪಗಳನ್ನು ಪರಿಶೀಲಿಸಿ ಸರಿಪಡಿಸುವುದು ಅಗತ್ಯ ಎಂದು ಹೇಳಿದರು.
ನ್ಯಾಯಾಂಗಕ್ಕೆ ಸಂಬಂಧಿಸಿದ ವಿಚಾರಗಳಲ್ಲಿ ರಾಜಕೀಯ ಪಕ್ಷಗಳು ಕಾನೂನುಬದ್ಧ ಮಾರ್ಗ ಅನುಸರಿಸಬೇಕು. ಪ್ರತಿಭಟನೆಗಳ ಮೂಲಕ ನ್ಯಾಯಾಂಗದ ಮೇಲೆ ಒತ್ತಡ ಹೇರುವುದು ಸರಿಯಲ್ಲ ಎಂದರು.
ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಒತ್ತಾಯಿಸಿದರು.

ನಮೋಶಿ ಪರ ಮತಯಾಚನೆ
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಮೋಶಿ ಅವರ ಗೆಲುವಿಗಾಗಿ ಶಿಕ್ಷಕರನ್ನು ಭೇಟಿ ಮಾಡಿ ಮತಯಾಚಿಸುತ್ತಿರುವುದಾಗಿ ಛಲವಾದಿ ತಿಳಿಸಿದರು.
ರಾಯಚೂರಿನಲ್ಲಿ ಪ್ರಚಾರ ನಡೆಸಿದ್ದು, ಯಾದಗಿರಿ ಹಾಗೂ ಕಲಬುರಗಿಯಲ್ಲಿಯೂ ಶಿಕ್ಷಕರನ್ನು ಭೇಟಿ ಮಾಡಲಾಗುವುದು. ನಾಲ್ಕೂ ವಿಧಾನ ಪರಿಷತ್ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ, ರಾಜ್ಯ ಕಾರ್ಯದರ್ಶಿ ಲಲಿತಾ ಅನಪುರ, ಮಹೇಶರಡ್ಡಿ ಮುದ್ನಾಳ, ಶರಣಪ್ಪ ತಳವಾರ, ರಾಚನಗೌಡ ಮುದ್ನಾಳ ಸೇರಿದಂತೆ ಪಕ್ಷದ ಮುಖಂಡರು ಇದ್ದರು.

Leave a Reply

Your email address will not be published. Required fields are marked *

↑
Suddi Belaku