ಜನಸೇವೆ ಮಾಡಲು ಸರ್ಕಾರಿ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ಸಾರ್ವಜನಿಕ ಸೇವೆಯಲ್ಲಿರುವ ಸರ್ಕಾರಿ ಅಧಿಕಾರಿ ಹಾಗೂ ನೌಕರರು ಜನಸಾಮಾನ್ಯರ ಸೇವಕರಾಗಿ, ಅವರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ಮಾಡಬೇಕು ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ಸಭಾಂಗಣದ ಮೂಲಕ ಮಂಗಳವಾರ ಆಯೋಜಿಸಲಾಗಿದ್ದ ಕರ್ನಾಟಕ ಸರ್ಕಾರದ ಅಧಿಕಾರಿ, ನೌಕರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಜನಪ್ರತಿನಿಧಿಗಳು ಜನರ ಏಳಿಗೆಗಾಗಿ ಶ್ರಮಿಸಬೇಕು. ಅಧಿಕಾರಿಗಳ ಜವಾಬ್ದಾರಿ ಕೇವಲ ಆಡಳಿತಕ್ಕೆ ಸೀಮಿತವಾಗದೆ, ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಸರ್ಕಾರದ ಯಶಸ್ಸಿನಲ್ಲಿ ಸಹಭಾಗಿಯಾಗುವಂತೆ ಅವರು ಸಲಹೆ ನೀಡಿದರು.

ಈ ರಾಜ್ಯದಲ್ಲಿ ಹಲವಾರು ಮುಖ್ಯಮಂತ್ರಿಗಳು ತಮ್ಮದೇ ಆದ ಅನುಭವ, ಸಿದ್ದಾಂತಗಳ ಮೇಲೆ ಕಾರ್ಯನಿರ್ವಹಿಸಿ, ಜನರ ಸೇವೆಗಾಗಿ ಕೊಡುಗೆಯನ್ನು ನೀಡಿದ್ದಾರೆ.
ಕೆಂಗಲ್ ಹನುಮಂತಯ್ಯ, ಎಸ್.ಎಂ. ಕೃಷ್ಣ, ಸಿದ್ದರಾಮಯ್ಯ ಸೇರಿದಂತೆ ಇತರೆ ಅನೇಕ ಮಾಜಿ ಮುಖ್ಯಮಂತ್ರಿಗಳ ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿದ ಅವರು, ವಿಧಾನಸೌಧವು ನಾಡಿನ ಪ್ರಜಾಸತ್ತಾತ್ಮಕ ಮೌಲ್ಯಗಳ ಸಂಕೇತವಾಗಿದೆ. ಇದಕ್ಕಾಗಿ ಸರ್ಕಾರಿ ಕೆಲಸ ದೇವರ ಕೆಲಸ ಎಂದು ಸೌಧದ ಮೇಲೆ ಬರೆಯಲಾಗಿದೆ ಎಂದು ಹೇಳಿದರು.

ಜನಸೇವೆಗೆ ಆದ್ಯತೆ:
ರಾಜ್ಯದ ಸುಮಾರು 7 ಕೋಟಿ ಜನಸಂಖ್ಯೆಯಲ್ಲಿ ಅತ್ಯಲ್ಪ ಸಂಖ್ಯೆಯ 5.5 ಲಕ್ಷ ನೌಕರರು ಹಾಗೂ ಅಧಿಕಾರಿಗಳು ಸಾರ್ವಜನಿಕ ಸೇವೆ ಮಾಡುವ ಭಾಗ್ಯದ ಅವಕಾಶವನ್ನು ಪಡೆದಿದ್ದಾರೆ. ಈ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸೇತುವೆ ಯಾಗಿದ್ದಾರೆ.ಸರ್ಕಾರದ ನಾಡಿಮಿಡಿತವಾಗಿದ್ದಾರೆ.ಕಾರಣ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು, ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಇತಿಹಾಸ ಸೃಷ್ಟಿಸುವತ್ತ ಹೆಜ್ಜೆ:
ಪ್ರಜಾಪ್ರಭುತ್ವದ ನಾಲ್ಕು ಮುಖ್ಯ ಅಂಗಗಳಾದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾರಂಗಗಳು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ರಾಜ್ಯದ ಪ್ರಗತಿ ಸಾಧ್ಯ. ಹಾಗಾಗಿ, ಇತಿಹಾಸವನ್ನು ಓದುವುದಕ್ಕಿಂತ ಅಥವಾ ಬರೆಯುವುದಕ್ಕಿಂತ ಹೊಸ ಇತಿಹಾಸವನ್ನು ಸೃಷ್ಟಿಸುವುದು ನನ್ನ ಮುಖ್ಯ ಗುರಿಯಾಗಿದೆ. ನಮ್ಮ ಕೆಲಸಗಳು ಶಾಶ್ವತವಾಗಿ ಉಳಿಯುವಂತೆ ಮಾಡಬೇಕಾದರೆ ಉತ್ತಮ
ಆಡಳಿತ ನಡೆಸಬೇಕು.ಈ ದಿಸೆಯಲ್ಲಿ ನಿಮ್ಮೆಲ್ಲರ ಸಹಕಾರ , ಜವಾಬ್ದಾರಿ ಹೆಚ್ಚಾಗಿದೆ. ನಿಮ್ಮ ಶ್ರಮ , ಪಾರದರ್ಶಕತೆ ಜನರ ಜೀವನ ಬದಲಾವಣೆಗೆ ನೆರವಾಗಲಿ ಎಂದು ಅವರು ಅಭಿಪ್ರಾಯಪಟ್ಟರು.

ಜನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಿ :
ಸಾರ್ವಜನಿಕರ ಅರ್ಜಿಗಳು ಮತ್ತು ಕುಂದುಕೊರತೆಗಳು ಅನಗತ್ಯವಾಗಿ ಜಿಲ್ಲಾ ಅಥವಾ ರಾಜ್ಯ ಮಟ್ಟಕ್ಕೆ ತಲುಪಬಾರದು. ತಾಲೂಕು ಹಾಗೂ ಸ್ಥಳೀಯ ಮಟ್ಟದಲ್ಲೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಸೇರಿದಂತೆ ಸರ್ವ ಅಧಿಕಾರಿಗಳು ತಮ್ಮ ನಿಯೋಜಿತ ಕೇಂದ್ರ ಸ್ಥಾನದಲ್ಲೇ ವಾಸವಿರಬೇಕು. ಅಧಿಕಾರಿಗಳು ಕಚೇರಿಯಲ್ಲಿ ಕಡ್ಡಾಯವಾಗಿ ಲಭ್ಯವಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಬೇಕು ಎಂದು ಸೂಚಿಸಿದರು.

ಮನೆ ಬಾಗಿಲಿಗೆ ಖಾತಾ ತಲುಪಿಸುವ ಉದ್ದೇಶ:
ಗ್ರಾಮೀಣ ಪ್ರದೇಶದ ಸುಮಾರು 1 ಕೋಟಿ 11 ಲಕ್ಷ ಕುಟುಂಬಗಳಿಗೆ ಹಾಗೂ ನಗರ ಪ್ರದೇಶದ 25 ಲಕ್ಷ ಮನೆಗಳಿಗೆ ಉಚಿತವಾಗಿ ಫೋಟೋ ಹಾಗೂ ಸಹಿ ಸಹಿತ ಖಾತಾ/ಪ್ರಮಾಣಪತ್ರಗಳನ್ನು ನೀಡುವ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ 5 ರಿಂದ 6 ತಿಂಗಳ ಅವಧಿಯಲ್ಲಿ ರಾಜ್ಯದ ಎಲ್ಲಾ ಪಂಚಾಯಿತಿ ಹಾಗೂ ಹೋಬಳಿಗಳಲ್ಲಿ ಈ ಪ್ರಮಾಣಪತ್ರಗಳನ್ನು ತಲುಪಿಸುವ ಕೆಲಸ ಪೂರ್ಣಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಕರ್ನಾಟಕ, ರಾಷ್ಟ್ರಕ್ಕೆ ಮಾದರಿ:
ರಾಜ್ಯ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳು ಮತ್ತು ಗ್ಯಾರಂಟಿಗಳನ್ನು ಇಂದು ದೇಶದ ಇತರ ರಾಜ್ಯಗಳೂ ಅನುಸರಿಸುತ್ತಿದ್ದು, ಕರ್ನಾಟಕ ಮಾದರಿಯನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ಅಧಿಕಾರ ಎಂಬುದು ಕೇವಲ ಶಕ್ತಿಯ ಸಂಕೇತವಲ್ಲ, ಅದೊಂದು ಸಾರ್ವಜನಿಕ ಜವಾಬ್ದಾರಿ. ಬಸವಣ್ಣನವರ ಮಾರ್ಗದರ್ಶನದಂತೆ “ಜನಸೇವೆಯೇ ಜನಾರ್ದನ ಸೇವೆ” ಎಂಬ ತತ್ವದಡಿಯಲ್ಲಿ ಪ್ರತಿಯೊಬ್ಬರೂ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಅಧಿಕಾರಿಗಳು ಚೌಕಟ್ಟಿನೊಳಗೆ ನಿಂತು ಕಾನೂನುಬದ್ಧವಾಗಿ ಜನರಿಗೆ ಸಹಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಕಚೇರಿಗಳಿಗೆ ಬರುವ ಸಾರ್ವಜನಿಕರನ್ನು ಗೌರವದಿಂದ ಕಾಣಬೇಕು ಹಾಗೂ ಅವರ ಅಳಲನ್ನು ಆಲಿಸಿ ಸ್ಪಂದಿಸಬೇಕು. ತಂತ್ರಜ್ಞಾನವನ್ನು ಗರಿಷ್ಠ ಮಟ್ಟದಲ್ಲಿ ಬಳಸಿಕೊಂಡು, ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲದಂತೆ ಪಾರದರ್ಶಕತೆ ತರಬೇಕು. ಜನರು ನೀಡಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಂಡು, ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ, ನಿಸ್ವಾರ್ಥವಾಗಿ ಜನಸೇವೆ ಮಾಡಬೇಕೆಂದು ಅವರು ತಿಳಿಸಿದರು.

ಭ್ರಷ್ಟಾಚಾರಕ್ಕೆ ಶೂನ್ಯ ಸಹಿಷ್ಣುತೆ:
ಸರ್ಕಾರದ ಕೆಲಸ ಕಾರ್ಯಗಳಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಎಸ್ಪಿ, ತಹಶೀಲ್ದಾರ್ ಹಾಗೂ ಕಮಿಷನರ್ ಮಟ್ಟದ ಅಧಿಕಾರಿಗಳಿಂದ ಹಿಡಿದು ಕೆಳಹಂತದ ಸಿಬ್ಬಂದಿಯವರೆಗೆ ಎಲ್ಲರ ಕೆಲಸವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಪ್ರತಿಯೊಂದು ಕಾಮಗಾರಿ ಹಾಗೂ ಯೋಜನೆಗಳ ಪಾರದರ್ಶಕತೆಗೆ ತಂತ್ರಜ್ಞಾನವನ್ನು ಬಳಸಬೇಕು. ಫಲಾನುಭವಿಗಳ ಆಧಾರ್, ಫೋಟೋ, ವಿಡಿಯೋ ಆಧರಿತ ದಾಖಲೆಗಳನ್ನು ನಮೂದಿಸಬೇಕು. ರಾಜ್ಯಾದ್ಯಂತ ಪಿಡಬ್ಲ್ಯೂಡಿ, ಬಿಬಿಎಂಪಿ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪಕ್ಕೆ ತರಲಾಗುತ್ತಿದೆ ಎಂದರು.

ಅಧಿಕಾರಿಗಳ ಕ್ಷೇತ್ರ ಭೇಟಿ ನಿರಂತರವಿರಲಿ
ತಾಲೂಕು ಮತ್ತು ಗ್ರಾಮ ಮಟ್ಟದ ಅಧಿಕಾರಿಗಳು, ಪಿಡಿಒ, ತಹಶೀಲ್ದಾರ್ ಹಾಗೂ ಇತರ ಇಲಾಖೆಯ ಸಿಬ್ಬಂದಿಗಳ ಭೇಟಿಯ ಸಮಯ ಹಾಗೂ ಚಟುವಟಿಕೆಗಳನ್ನು ಹಿರಿಯ ಅಧಿಕಾರಿಗಳು ಪರಿಶೀಲಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಸ್ಥಳೀಯ ಮಟ್ಟದಲ್ಲಿ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು ಹಾಗೂ ವಸತಿನಿಲಯಗಳಿಗೆ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಮೂಲಸೌಕರ್ಯ, ಬಿಸಿಊಟ ಮತ್ತು ನಿರ್ವಹಣೆಯನ್ನು ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿದರು.

ಮುಂಬರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಗಳ ಜೊತೆಗೆ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಸಹ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಬಿಇಒ ಹಾಗೂ ಡಿಡಿಪಿಐಗಳು ಕ್ರಮ ವಹಿಸಬೇಕು ಎಂದರು.

ನಾವೆಲ್ಲರೂ ‘ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡಬೇಕು. ಪ್ರತಿಯೊಬ್ಬ ಸರ್ಕಾರಿ ನೌಕರನೂ ಜವಾಬ್ದಾರಿಯಿಂದ ಜನರ ಸೇವೆಗೆ ಬದ್ಧರಾಗಿರಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು.

ರಾಜ್ಯದ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಕುಣಿಗಲ್ದಿಂದ ವರ್ಚುವಲ್ ಮೂಲಕ ಭಾಗವಹಿಸಿ ಮಾತನಾಡಿ,
ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ಸಾರ್ವಜನಿಕರ ಹಾಗೂ ರೈತರ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ತುರ್ತು ಪರಿಸ್ಥಿತಿಯ ಮಾದರಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಸರ್ಕಾರವು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಮತ್ತು ನೇರ ಸಂವಾದಕ್ಕಾಗಿ ಆರಂಭಿಸಿರುವ ‘ಪ್ರಜಾಸೇವೆ’ ಇಲಾಖೆಯಲ್ಲಿ ಸರ್ಕಾರದ ಯೋಜನೆಗಳು ಹಾಗೂ ಪರಿಹಾರ ಕ್ರಮಗಳು ತಳಮಟ್ಟದ ಜನರಿಗೆ ತಲುಪಬೇಕು ಎಂಬ ಉದ್ದೇಶದಿಂದ ಜಾರಿಗೊಳಿಸಲಾಗಿದೆ ಎಂದು ಪ್ರತಿಪಾದಿಸಿದರು.

164 ತಾಲ್ಲೂಕುಗಳಲ್ಲಿ ಭೀಕರ ಅಭಾವ:
ರಾಜ್ಯದ ಒಟ್ಟು 240 ತಾಲ್ಲೂಕುಗಳ ಪೈಕಿ 164 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬರಗಾಲ ಆವರಿಸಿದೆ. ರೈತರು ಬೆಳೆ ನಷ್ಟದಿಂದ ತೀವ್ರ ಸಂಕಷ್ಟದಲ್ಲಿದ್ದಾರೆ. ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಕುಡಿಯುವ ನೀರಿನ ಅಭಾವ ಹೆಚ್ಚಾಗಿದೆ. ಅಲ್ಲದೆ ಆಂಧ್ರ , ತೆಲಂಗಾಣ, ತಮಿಳುನಾಡು ನೆರೆ ರಾಜ್ಯಗಳಲ್ಲೂ ಬೆಳೆ ಇಲ್ಲದ ಕಾರಣ ಮೇವು ಖರೀದಿಗೂ ತೊಂದರೆಯಾಗಿ, ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೆ.ಎಮ್.ಎಫ್ ಮೂಲಕ ತುಮಕೂರು ಸೇರಿದಂತೆ ವಿವಿಧೆಡೆ 1 ಲಕ್ಷ ಮೇವಿನ ಕಿಟ್‌ಗಳನ್ನು ವಿತರಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ತಿಳಿಸಿದರು.

ವಿಬಿ ಜಿ ರಾಮ್ ಜಿ ಯೋಜನೆ ಮೂಲಕ ಉದ್ಯೋಗ: ಗ್ರಾಮೀಣ ಭಾಗದಿಂದ ಜನರು ಗುಳೆ ಹೋಗುವುದನ್ನು ತಡೆಯಲು ಉದ್ಯೋಗ ಖಾತರಿ ಕಾಮಗಾರಿಗಳಿಗೆ ವಿಬಿ ಜಿ ರಾಮ್ ಜಿ ಯೋಜನೆಯಡಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಬೆಳೆ ವಿಮೆ ನೊಂದಣಿ ಸಮಯದಲ್ಲಿ ಆಸಕ್ತಿ ತೋರುವ ಇನ್ಶೂರೆನ್ಸ್ ಕಂಪನಿಗಳು, ರೈತರಿಗೆ ನಷ್ಟ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವುದಕ್ಕೆ, ಈ ಬಗ್ಗೆ ಶೀಘ್ರವೇ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದರು.

ಗ್ರಾಮೀಣ ಭಾಗಗಳಲ್ಲಿ ಭಾರತ್ ಜೋಡೋ’ ಸಂಘಗಳ ರಚನೆ ಗ್ರಾಮೀಣ ಭಾಗದಲ್ಲಿ, ಸಾಮಾಜಿಕ ಸಮಾನತೆ ಹಾಗೂ ಸಾಂಸ್ಕೃತಿಕ ಭಾವೈಕ್ಯತೆಯನ್ನು ಮೂಡಿಸಲು ಪ್ರತಿಯೊಂದು ಪಂಚಾಯಿತಿಯಲ್ಲಿ ‘ಭಾರತ್ ಜೋಡೋ’ ಸಂಘಗಳನ್ನು ರಚಿಸಿ, ಪ್ರತಿ ಸಂಘಕ್ಕೆ ವರ್ಷಕ್ಕೆ ರೂ.10 ಲಕ್ಷ ಅನುದಾನ ನೀಡುವ ವಿನೂತನ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಬರಗಾಲದ ತೀವ್ರತೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವುದರಿಂದ, ಪ್ರತಿಯೊಬ್ಬ ಜಿಲ್ಲಾಧಿಕಾರಿ, ಸಿಇಒ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರ ಅಹವಾಲುಗಳನ್ನು ಆಲಿಸಬೇಕು.ಕಾನೂನಿನ ಚೌಕಟ್ಟಿನಲ್ಲಿ ನೆರವಾಗಬೇಕು ಎಂದು ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು, ಉಪಮುಖ್ಯಮಂತ್ರಿಯವರು ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ ಬರ ಪರಿಸ್ಥಿತಿ, ಬೆಳೆ ಹಾನಿ, ಕುಡಿಯುವ ನೀರಿನ ಸಮಸ್ಯೆ, ಮೇವಿನ ಲಭ್ಯತೆ ಕುರಿತು ಮಾಹಿತಿ ಪಡೆದುಕೊಂಡರು.

ಈ ವೇಳೆ ಸಚಿವರಾದ ಪ್ರಿಯಾಂಕ್ ಖರ್ಗೆ, ಲಕ್ಷ್ಮಣ ಸವದಿ, ಸಂತೋಷ್ ಎಸ್. ಲಾಡ್, ಅಜಯ್ ಸಿಂಗ್, ವಿಜಯಾನಂದ ಕಾಶಪ್ಪನವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯದರ್ಶಿಗಳು, ಸಚಿವಾಲಯದ ಹಿರಿಯ ಅಧಿಕಾರಿಗಳು, ಹಾಗೂ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದಿಂದ ವಿಡಿಯೋ ಸಂವಾದದ ಮೂಲಕ ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ,ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ- ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Suddi Belaku