
ಸುದ್ದಿ ಬೆಳಕು ವಾರ್ತೆ
ಗುರುಮಠಕಲ್ : ಶಾಲಾ-ಕಾಲೇಜುಗಳು ಆರಂಭವಾಗಿದ್ದರೂ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆಗದೆ ದಿನನಿತ್ಯ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ತಾಲೂಕು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ನಾಗೇಶ್ ಗದ್ದಿಗಿ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಿರುವುದು ಉತ್ತಮ ಯೋಜನೆಯಾದರೂ, ತಾಂತ್ರಿಕ ದೋಷಗಳಿಂದಾಗಿ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಇತರೆ ಭಾಗಗಳಲ್ಲಿ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಪ್ರಕ್ರಿಯೆ ಸುಗಮವಾಗಿ ನಡೆಯುತ್ತಿದ್ದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ಮಾತ್ರ ಇನ್ನೂ ಸಂಪೂರ್ಣ ಆನ್‌ಲೈನ್ ಬಸ್ ಪಾಸ್ ವ್ಯವಸ್ಥೆ ಜಾರಿಯಾಗದಿರುವುದು ಬೇಸರದ ಸಂಗತಿ ಎಂದು ಹೇಳಿದರು.
ಶಾಲಾ-ಕಾಲೇಜುಗಳು ಆರಂಭವಾಗಿ ಹಲವು ದಿನಗಳು ಕಳೆದಿದ್ದರೂ ವಿದ್ಯಾರ್ಥಿಗಳು ಪಾಸ್ ಇಲ್ಲದೆ ಪ್ರತಿದಿನ ನಗದು ಹಣ ನೀಡಿ ಪ್ರಯಾಣಿಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಗ್ರಾಮೀಣ ಭಾಗದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಇದು ಹೆಚ್ಚುವರಿ ಆರ್ಥಿಕ ಹೊರೆಯಾಗಿದೆ ಎಂದು ತಿಳಿಸಿದರು.
ಸೇವಾ ಸಿಂಧು ಹಾಗೂ ಕೆಕೆಆರ್‌ಟಿಸಿ ಪೋರ್ಟಲ್‌ನಲ್ಲಿ ಸರ್ವರ್ ಸಮಸ್ಯೆ, ಒಟಿಪಿ ತೊಂದರೆ ಹಾಗೂ ಬೋರ್ಡಿಂಗ್-ಡ್ರಾಪಿಂಗ್ ಪಾಯಿಂಟ್‌ಗಳ ಗೊಂದಲದಿಂದ ವಿದ್ಯಾರ್ಥಿಗಳು ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಿಗೆ ಅಲೆದಾಡುವಂತಾಗಿದೆ ಎಂದು ದೂರಿದರು.
ಬೆಂಗಳೂರು ಸೇರಿದಂತೆ ಇತರೆ ಸಾರಿಗೆ ಸಂಸ್ಥೆಗಳಲ್ಲಿ ಆನ್‌ಲೈನ್ ಮೂಲಕ ಸುಲಭವಾಗಿ ಬಸ್ ಪಾಸ್ ಪಡೆಯಲು ಅವಕಾಶವಿರುವಾಗ, ಶೈಕ್ಷಣಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ದೊರೆಯದಿರುವುದು ತಾರತಮ್ಯಕ್ಕೆ ಕಾರಣವಾಗಿದೆ ಎಂದು ಪ್ರಶ್ನಿಸಿದರು.
ವಿದ್ಯಾರ್ಥಿಗಳಿಗೆ ತಕ್ಷಣವೇ ಸೇವಾ ಸಿಂಧು ಅಥವಾ ಕೆಕೆಆರ್‌ಟಿಸಿ ಅಧಿಕೃತ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಬೇಕು. ತಾಂತ್ರಿಕ ಸಮಸ್ಯೆಗಳು ಮುಂದುವರಿದರೆ ಕೌಂಟರ್‌ಗಳ ಮೂಲಕ ಆಫ್‌ಲೈನ್ ಬಸ್ ಪಾಸ್ ವಿತರಣೆ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಬಸ್ ಪಾಸ್ ವಿತರಣೆ ಆಗುವವರೆಗೆ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕ ರಸೀದಿ ಅಥವಾ ಗುರುತಿನ ಚೀಟಿ ತೋರಿಸಿ ಉಚಿತ ಅಥವಾ ರಿಯಾಯಿತಿ ದರದಲ್ಲಿ ಪ್ರಯಾಣಿಸಲು ಸಾರಿಗೆ ಸಿಬ್ಬಂದಿಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.
ಸಾರಿಗೆ ಸಂಸ್ಥೆಯ ಉನ್ನತ ಅಧಿಕಾರಿಗಳು ಹಾಗೂ ಸಾರಿಗೆ ಸಚಿವರು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಮುಂದಿನ ಎರಡು-ಮೂರು ದಿನಗಳಲ್ಲಿ ಪರಿಹಾರ ಕಲ್ಪಿಸದಿದ್ದರೆ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸೇರಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಮೇಧಾ, ಮಲ್ಲಿಕಾರ್ಜುನ ಕಾಕಲವಾರ, ಕಾಶಪ್ಪ ಭೋಯ, ನರಸಿಂಹಲು ಗಂಗನೋಳ, ಎಸ್.ಪಿ., ಮಹೇಶ್ ಗೌಡ, ಭೀಮಶಪ್ಪ ತಲಾರಿ, ರಾಮುಲು ಕೋಡಿಗಂಟಿ, ಉದಯಕುಮಾರ ಕೊಂಕಲ, ಅಯಾಝ್ ಅಲಿ, ಅಂಜಿ, ಬನ್ನು, ಕೃಷ್ಣಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.












Leave a Reply