
ಸುದ್ದಿ ಬೆಳಕು ವಾರ್ತೆ
ಯಾದಗಿರಿ : ಜಿಲ್ಲೆಯಲ್ಲಿ ನಸುಕಿನ ಜಾವದಿಂದಲೇ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಯಾದಗಿರಿ ನಗರ ಸೇರಿದಂತೆ ಹಲವೆಡೆ ವರುಣನ ಆರ್ಭಟ ಮುಂದುವರಿದಿದೆ.
ನಗರದ ಪ್ರಮುಖ ರಸ್ತೆಗಳು ಮಳೆ ನೀರಿನಿಂದ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ನಗರದ ಕೇಂದ್ರ ಬಸ್ ನಿಲ್ದಾಣ ಸಮೀಪದ ರಸ್ತೆ ಸಂಪೂರ್ಣ ನೀರಿನಿಂದ ಆವೃತವಾಗಿದ್ದು, ಬೈಕ್ ಹಾಗೂ ಇತರೆ ವಾಹನಗಳು ಜಲ ದಿಗ್ಬಂಧನಕ್ಕೆ ಸಿಲುಕಿದ ದೃಶ್ಯಗಳು ಕಂಡುಬಂದವು.
ರಸ್ತೆ ಮಧ್ಯೆ ನಿಂತ ವಾಹನಗಳ ಸುತ್ತ ಮಳೆ ನೀರು ತುಂಬಿಕೊಂಡ ಪರಿಣಾಮ ಸಂಚಾರಕ್ಕೆ ಭಾರೀ ತೊಂದರೆ ಉಂಟಾಯಿತು. ಮಳೆ ನೀರು ಸರಾಗವಾಗಿ ಹರಿದುಹೋಗಲು ಸಮರ್ಪಕ ವ್ಯವಸ್ಥೆ ಮಾಡದ ನಗರಸಭೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚರಂಡಿಗಳ ಸ್ವಚ್ಛತೆ ಹಾಗೂ ನೀರು ಹರಿವು ವ್ಯವಸ್ಥೆ ಸರಿಯಾಗಿ ನಿರ್ವಹಿಸದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದು, ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.












Leave a Reply