ಗುರುಮಠಕಲ್: ನಾವು ಕೇವಲ ನವೆಂಬರ್ 1ರಂದು ಮಾತ್ರ ಕನ್ನಡ ಭಾಷೆಯ ಬಗ್ಗೆ ಭಾಷಣ ಮಾಡುವುದಲ್ಲ, ಪ್ರತಿದಿನವೂ ನಮ್ಮ ಓದು, ಬರವಣಿಗೆ, ಮಾತು ಹಾಗೂ ವ್ಯವಹಾರದಲ್ಲಿ ಕನ್ನಡವನ್ನು ಬಳಸಬೇಕು. ನಮ್ಮ ಭಾಷೆ, ಸಂಸ್ಕೃತಿ ಮತ್ತು ಕಲೆಗಳನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಕೆಲಸವನ್ನು ಮೊದಲು ಮನೆಯಿಂದಲೇ ಆರಂಭಿಸಿ, ಮಕ್ಕಳ ಮನಸ್ಸಿನಲ್ಲಿ ಕನ್ನಡ ಪ್ರೀತಿಯನ್ನು ಬಿತ್ತುವ ಕೆಲಸವಾಗಬೇಕು ಎಂದು ಯಲ್ಹೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರತ್ನ ಹೇಳಿದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಹೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ, 2026-27ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಥ್ರೋಬಾಲ್ ಕ್ರೀಡಾಕೂಟದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾದ ಯಲ್ಹೇರಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ತಾಲೂಕು ಪಂಚಾಯಿತಿ ಗುರುಮಠಕಲ್ ಹಾಗೂ ಗ್ರಾಮ ಪಂಚಾಯಿತಿ ಯಲ್ಹೇರಿ ವತಿಯಿಂದ ಅಭಿನಂದನಾ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.
ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಪ್ರತಿಯೊಬ್ಬ ವಿದ್ಯಾರ್ಥಿಯೂ ಹೋರಾಟದ ಮನೋಭಾವ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಪ್ರಸ್ತುತ ಇಂಗ್ಲಿಷ್ ಭಾಷೆಯ ವ್ಯಾಮೋಹದಿಂದಾಗಿ ಇಂದಿನ ಪೀಳಿಗೆಯ ಮಕ್ಕಳಲ್ಲಿ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿದೆ. ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳಲ್ಲಿ ಕನ್ನಡ ಭಾಷೆಯ ಬಗ್ಗೆ ಪ್ರೀತಿ ಹುಟ್ಟಿಸಬೇಕು. ಕನ್ನಡ ಭಾಷೆಯನ್ನು ಬೆಳೆಸಬೇಕು ಹಾಗೂ ಕನ್ನಡದ ಉಳಿವಿಗಾಗಿ ಪ್ರತಿಯೊಬ್ಬರೂ ಪಣತೊಡಬೇಕು ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹೇಳಿದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಬನ್ನಪ್ಪ ಮಾತನಾಡಿ, ಕನ್ನಡ ಭಾಷೆ ಇಂದು ಎಲ್ಲ ಭಾಷೆಗಳಿಗಿಂತಲೂ ಉನ್ನತ ಸ್ಥಾನದಲ್ಲಿರುವುದು ನಮಗೆ ಹೆಮ್ಮೆಯ ಸಂಗತಿಯಾಗಿದೆ. ಕನ್ನಡ ಭಾಷೆಯಲ್ಲಿಯೇ ಐಎಎಸ್, ಐಪಿಎಸ್ನಂತಹ ಉನ್ನತ ಹುದ್ದೆಗಳ ಪರೀಕ್ಷೆಗಳನ್ನು ಬರೆಯಲು ಅವಕಾಶವಿದೆ. ಕನ್ನಡ ಭಾಷೆಗೆ ಜ್ಞಾನಪೀಠದಂತಹ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿರುವುದು ಅದರ ಶ್ರೇಷ್ಠತೆಗೆ ಸಾಕ್ಷಿಯಾಗಿದೆ. ನಮ್ಮ ಮಕ್ಕಳು ಕನ್ನಡ ಭಾಷೆಯ ಮೂಲಕವೇ ದೊಡ್ಡ ದೊಡ್ಡ ಸಾಧನೆಗಳನ್ನು ಮಾಡಲು ಸಾಕಷ್ಟು ಅವಕಾಶಗಳಿವೆ. ಅಂತಹ ಅವಕಾಶಗಳನ್ನು ಬಳಸಿಕೊಳ್ಳುವ ಛಲ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಇರಬೇಕು ಎಂದರು.
ಇಂತಹ ಧ್ವಜಾರೋಹಣ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಇತಿಹಾಸವನ್ನು ನೆನಪಿಸುತ್ತವೆ. ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು ಮತ್ತು ಸಂಸ್ಕೃತಿ ಬಹಳ ಮುಖ್ಯ. ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡಾಗ ನಮ್ಮಲ್ಲಿ ಉತ್ತಮ ಸಂಸ್ಕೃತಿ ಬೆಳೆಯುತ್ತದೆ ಎಂದು ನಿವೃತ್ತ ದೈಹಿಕ ಶಿಕ್ಷಕ ಅನಂತರೆಡ್ಡಿ ಶಿವರಾಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರವಿಕುಮಾರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳಾದ ಕರವಸೂಲಿಗಾರ ಅಯ್ಯಣ್ಣ, ಕಂಪ್ಯೂಟರ್ ಆಪರೇಟರ್ ಮಹಾದೇವ ಹಾಗೂ ಇತರ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಶಾಲಾ ಮಕ್ಕಳು ಹಾಗೂ ಗ್ರಾಮದ ಹಿರಿಯರು ಭಾಗವಹಿಸಿದ್ದರು. ಸಹ ಶಿಕ್ಷಕ ಸಂತೋಷ ನಿರೂಪಿಸಿದರು. ಶರೀಫ್ ವಂದಿಸಿದರು.
Leave a Reply