ಸುದ್ದಿ ಬೆಳಕು ವಾರ್ತೆ
ಶಹಾಪುರ : ಬರಗಾಲದ ಕಠಿಣ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗದ ಶ್ರಮಿಕರು ಹಾಗೂ ಕೂಲಿಕಾರ್ಮಿಕರಿಗೆ ಆಸರೆಯಾಗುವ ನಿಟ್ಟಿನಲ್ಲಿ ತಾಲೂಕಿನ ಮದ್ದರಕಿ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಯಾದಗಿರಿ, ತಾಲೂಕು ಪಂಚಾಯಿತಿ ಶಹಾಪುರ ಹಾಗೂ ಗ್ರಾಮ ಪಂಚಾಯಿತಿ ಮದ್ದರಕಿ ಸಹಯೋಗದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲಾಗಿರುವ ಗೋಕಟ್ಟೆ ನಿರ್ಮಾಣ ಕಾಮಗಾರಿ ಸ್ಥಳದಲ್ಲೇ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಹಾಗೂ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.
ಬರದಿಂದ ಬಸವಳಿದ ಶ್ರಮಿಕರ ಬದುಕಿಗೆ ಭರವಸೆ ಮೂಡಿಸುವ ಆಶಯದೊಂದಿಗೆ ಶಹಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶರಣಬಸಪ್ಪಗೌಡ ದರ್ಶನಾಪೂರ ಅವರು ಕಾಮಗಾರಿ ಸ್ಥಳಕ್ಕೆ ಆಗಮಿಸಿ, ಕೂಲಿಕಾರ್ಮಿಕರ ನಡುವೆಯೇ ಕನ್ನಡ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ನೆರವೇರಿಸಿ ರಾಷ್ಟ್ರ ಧ್ವಜಾರೋಹಣ ಮಾಡಿದರು.
ಬಳಿಕ ಮಾತನಾಡಿದ ಶಾಸಕರು, ತಾಲೂಕಿನಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಕೂಲಿಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ವಿವಿಧ ಕಾಮಗಾರಿಗಳನ್ನು ಸಕ್ರಿಯವಾಗಿ ಕೈಗೊಳ್ಳಲಾಗಿದೆ. ಬರಗಾಲದ ಸಂದರ್ಭದಲ್ಲಿ ಯಾರೂ ಉದ್ಯೋಗ ಅರಸಿ ದೂರದ ಪಟ್ಟಣಗಳಿಗೆ ಗುಳೆ ಹೋಗಬಾರದು. ಸಾರ್ವಜನಿಕರು ಹಾಗೂ ಕೂಲಿಕಾರ್ಮಿಕರು ತಮ್ಮ ತಮ್ಮ ಗ್ರಾಮಗಳಲ್ಲಿಯೇ ಲಭ್ಯವಾಗುವ ಉದ್ಯೋಗಾವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಉದ್ಯೋಗ ಪಡೆಯಬೇಕು ಎಂದು ಮನವಿ ಮಾಡಿದರು.
ಜಲ ಸಂರಕ್ಷಣಾ ಕಾಮಗಾರಿಗಳಿಗೆ ಆದ್ಯತೆ
ಭವಿಷ್ಯದಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಹಾಗೂ ಅಂತರ್ಜಲ ಮಟ್ಟ ಸುಧಾರಣೆಗೆ ಮಳೆನೀರು ಮತ್ತು ಸಾಂಪ್ರದಾಯಿಕ ಜಲಮೂಲಗಳ ಸಂರಕ್ಷಣೆಗೆ ಪೂರಕವಾದ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು ಎಂದು ಶಾಸಕರು ಸೂಚಿಸಿದರು.
ಹೆಚ್ಚಿನ ಸಂಖ್ಯೆಯ ಕೂಲಿಕಾರ್ಮಿಕರಿಗೆ ಕೆಲಸ ದೊರೆಯುವಂತಹ ಕಾಮಗಾರಿಗಳನ್ನು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಆದ್ಯತೆಯ ಮೇರೆಗೆ ಆಯ್ಕೆ ಮಾಡಿಕೊಂಡು ಗ್ರಾಮೀಣ ಜಲ ಸಂರಕ್ಷಣಾ ಆಸ್ತಿಗಳನ್ನು ಸೃಜಿಸುವ ಮೂಲಕ ದುಡಿಯುವ ಕೈಗಳಿಗೆ ಕೆಲಸ ಒದಗಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮದ್ದರಕಿ ಗ್ರಾಮದಲ್ಲಿ ಕೂಲಿಕಾರ್ಮಿಕರಿಂದ ನಿರ್ಮಿಸಲಾಗುತ್ತಿರುವ ಗೋಕಟ್ಟೆ ಕಾಮಗಾರಿಯನ್ನು ವೀಕ್ಷಿಸಿದ ಅವರು, ಕಾರ್ಮಿಕರ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.














Leave a Reply