ಕೊಲಿ ಸಮಾಜಕ್ಕೆ ಎಸ್‌ಟಿ ಸ್ಥಾನಮಾನ: ದೆಹಲಿಯಲ್ಲಿ ಮಹಾಸಮಾವೇಶಕ್ಕೆ ಕರೆ

Posted by

ಸುದ್ದಿ ಬೆಳಕು ವಾರ್ತೆ

ಸೈದಾಪುರ : ಟೋಕರೆ ಕೊಲಿ, ಕೊಲಿ, ಕಬ್ಬಲಿಗ, ಅಂಬಿಗಾ, ಬೇಸ್ತ ಸೇರಿದಂತೆ ವಿವಿಧ ಪರ್ಯಾಯ ಹೆಸರಿನಿಂದ ಗುರುತಿಸಲ್ಪಡುವ ಸಮುದಾಯಗಳನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ರಾಷ್ಟ್ರಮಟ್ಟದ ಬೃಹತ್ ಕೊಲಿ ಸಮಾಜ ಸಮಾವೇಶವನ್ನು ಜೂನ್ 21ರಂದು ನವದೆಹಲಿಯ ತಾಲ್ಕಟೋರಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕೊಲಿ ಸಮಾಜದ ಯುವ ಘಟಕದ ರಾಜ್ಯಾಧ್ಯಕ್ಷ ನರಸಿಂಗ ಕೊಲಿ ಗೊಂದಡಗಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಮಾವೇಶದಲ್ಲಿ ದೇಶದ ವಿವಿಧ ರಾಜ್ಯಗಳ ಕೊಲಿ ಸಮಾಜದ ಪ್ರತಿನಿಧಿಗಳು, ಯುವಕರು, ಜನಪ್ರತಿನಿಧಿಗಳು ಹಾಗೂ ಸಮಾಜದ ಮುಖಂಡರು ಭಾಗವಹಿಸಲಿದ್ದು, ಸಮಾಜ ಎದುರಿಸುತ್ತಿರುವ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಸಮಾವೇಶದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್, ದೆಹಲಿ ಮುಖ್ಯಮಂತ್ರಿ, ಕೇಂದ್ರ ಸರ್ಕಾರದ ಸಚಿವರು ಹಾಗೂ ವಿವಿಧ ರಾಜ್ಯಗಳ ಸಚಿವರು ಮತ್ತು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ. ಸಮಾಜದ ಬೇಡಿಕೆಗಳು ಹಾಗೂ ಹಕ್ಕುಗಳ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಕೊಲಿ ಸಮಾಜದ ವಿವಿಧ ಉಪ ಪಂಗಡಗಳನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವುದರ ಜೊತೆಗೆ ಸಮಾಜದ ಅಭಿವೃದ್ಧಿಗೆ ಅಗತ್ಯವಾದ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಿಂದ, ವಿಶೇಷವಾಗಿ ಯಾದಗಿರಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು, ಮಹಿಳೆಯರು ಹಾಗೂ ಸಮಾಜದ ಮುಖಂಡರು ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ನರಸಿಂಗ ಕೊಲಿ ಗೊಂದಡಗಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

Suddi Belaku