
ಸುದ್ದಿ ಬೆಳಕು ವಾರ್ತೆ
ಯಾದಗಿರಿ: ವಿಕಾಶೀಲ ಇನ್ಸಾನ್ ಪಕ್ಷ (ವಿಐಪಿ) ಕರ್ನಾಟಕ ರಾಜ್ಯಾಧ್ಯಕ್ಷ ಮೋಹನ್ ಕುಮಾರ್ ಬಿ.ಕೆ. ಅವರ ಆದೇಶದಂತೆ, ಯಾದಗಿರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಹಿರಿಯ ರಾಜಕೀಯ ಮುಖಂಡ ಸಾಬಣ್ಣ ಬಸವಂತಪುರ ಅವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಲಾಗಿದೆ.
ನೇಮಕದ ಬಳಿಕ ಮಾತನಾಡಿದ ಸಾಬಣ್ಣ ಬಸವಂತಪುರ, “90ರ ದಶಕದಲ್ಲಿ ಬಿಜೆಪಿ ಪಕ್ಷವನ್ನು ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಗ್ರಾಮ ಗ್ರಾಮಕ್ಕೂ ಕೊಂಡೊಯ್ದು ಸದಸ್ಯತ್ವ ಅಭಿಯಾನ ನಡೆಸಿದ್ದೆ. ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದೆ. ಅಂದಿನ ಅಖಂಡ ಗುಲ್ಬರ್ಗ ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ, ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ, ಯಾದಗಿರಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಟದ ಸಹ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದೇನೆ” ಎಂದು ಹೇಳಿದರು.
“ಆದರೆ ಇತ್ತೀಚಿನ ದಿನಗಳಲ್ಲಿ ಬಿಜೆಪಿ ಮುಖಂಡರು ನನ್ನನ್ನು ಕಡೆಗಣಿಸಿದ್ದರಿಂದ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದೆ. ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿರುವ ವಿಕಾಶೀಲ ಇನ್ಸಾನ್ ಪಕ್ಷದ ರಾಜ್ಯಾಧ್ಯಕ್ಷ ಮೋಹನ್ ಕುಮಾರ್ ಬಿ.ಕೆ. ಅವರು ನನ್ನ ಮೇಲೆ ವಿಶ್ವಾಸವಿಟ್ಟು ಯಾದಗಿರಿ ಜಿಲ್ಲಾಧ್ಯಕ್ಷರ ಜವಾಬ್ದಾರಿಯನ್ನು ನೀಡಿದ್ದಾರೆ” ಎಂದು ಕೃತಜ್ಞತೆ ಸಲ್ಲಿಸಿದರು.
ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವುದರ ಜೊತೆಗೆ ಶೋಷಿತ, ಹಿಂದುಳಿದ ಹಾಗೂ ವಂಚಿತ ವರ್ಗಗಳ ಧ್ವನಿಯಾಗಿ ಕಾರ್ಯನಿರ್ವಹಿಸುವುದಾಗಿ ಸಾಬಣ್ಣ ಬಸವಂತಪುರ ತಿಳಿಸಿದರು.











Leave a Reply