ಶಹಾಪುರದಲ್ಲಿ ‘ಬಾಗಿಲಿಗೆ ಬಂತು ಸರ್ಕಾರ’ ಪ್ರಜಾಸೇವೆ ಅಭಿಯಾನ: ಜನರ ಅಹವಾಲುಗಳಿಗೆ ಸ್ಥಳದಲ್ಲೇ ಸ್ಪಂದನೆ

Posted by

–

ಸುದ್ದಿ ಬೆಳಕು ವಾರ್ತೆ

ಶಹಾಪುರ : ಕರ್ನಾಟಕ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ತಾಲೂಕು ಮಟ್ಟದ ಪ್ರಜಾಸೇವೆ ಅಭಿಯಾನವು ಶಹಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

‘ಜನರ ಬಳಿಗೆ ಸರ್ಕಾರ–ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ’ ಎಂಬ ಆಶಯದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಆಲಿಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಸರ್ಕಾರದ ಸವಲತ್ತುಗಳು ಹಾಗೂ ಜನಪರ ಯೋಜನೆಗಳು ಯಾವುದೇ ವಿಳಂಬವಿಲ್ಲದೆ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಸಾರ್ವಜನಿಕರ ಕೆಲಸ–ಕಾರ್ಯಗಳನ್ನು ಅಧಿಕಾರಿಗಳು ಆದ್ಯತೆಯ ಮೇರೆಗೆ ಪರಿಗಣಿಸಿ ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.

ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಅರ್ಹ ಫಲಾನುಭವಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆದುಕೊಳ್ಳಲು ಇಂತಹ ಪ್ರಜಾಸೇವೆ ಅಭಿಯಾನಗಳು ಸಹಕಾರಿಯಾಗಲಿವೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು ಸೇರಿದಂತೆ ನೂರಾರು ಸಾರ್ವಜನಿಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

↑
Suddi Belaku