
ಸುರಪುರ : ರಾಜ್ಯ ಸರ್ಕಾರವು 2025-26ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಪ್ರಶಸ್ತಿ, ಸಾಹಿತ್ಯ ಮತ್ತು ನಾಟಕ ಪ್ರಶಸ್ತಿ, ಕಲಾ ಪ್ರಶಸ್ತಿ ಹಾಗೂ ಸಂಗೀತ–ನೃತ್ಯ ವಿಭಾಗಗಳ ವಿವಿಧ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಈ ಪ್ರಶಸ್ತಿ ಪಟ್ಟಿಯಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜನಪದ ಕಲಾವಿದರಾದ ಬಿ. ಲಕ್ಷ್ಮಣ ಅವರು “ಜಾನಪದ ಶ್ರೀ” ಪ್ರಶಸ್ತಿಗೆ ಆಯ್ಕೆಯಾಗಿರುವುದು ಜಿಲ್ಲೆಯ ಕಲಾಭಿಮಾನಿಗಳಿಗೆ ಹೆಮ್ಮೆಯ ಸಂಗತಿಯಾಗಿದೆ.
“ದುಂದುಮೆಯ ದುಂದುಭಿ” ಎಂಬ ಜನಪದ ಗೀತೆಯ ಮೂಲಕ ಜನಪ್ರಿಯತೆ ಪಡೆದಿರುವ ಲಕ್ಷ್ಮಣ ಅವರು, ಹಲವು ವರ್ಷಗಳಿಂದ ಗ್ರಾಮೀಣ ಭಾಗಗಳಲ್ಲಿ ಜನಪದ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಗ್ರಾಮೀಣ ಜನಜೀವನದ ಜೊತೆ ಬೆಸೆದುಕೊಂಡಿರುವ ಜನಪದ ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ.

ಅದೇ ರೀತಿಯಲ್ಲಿ ಸ್ಥಳೀಯ ಕಲಾವಿದರನ್ನು ಉತ್ತೇಜಿಸುವುದು, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜನಪದ ಕಲೆಗಳ ಪ್ರಚಾರ–ಪ್ರಸಾರ ಮಾಡುವುದು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಬಿ. ಲಕ್ಷ್ಮಣ ಅವರ ಈ ಸಾಧನೆಗೆ ಜಿಲ್ಲೆಯ ವಿವಿಧ ಕ್ಷೇತ್ರಗಳ ಗಣ್ಯರು, ಕಲಾಭಿಮಾನಿಗಳು ಹಾಗೂ ಸಾರ್ವಜನಿಕರಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.











Leave a Reply