
ಸುದ್ದಿ ಬೆಳಕು ವಾರ್ತೆ
ಯಾದಗಿರಿ, ಏಪ್ರಿಲ್ 18 : ಜಿಲ್ಲಾ ಕೇಂದ್ರವಾಗಿ 15 ವರ್ಷಗಳು ಕಳೆದಿರುವ ಯಾದಗಿರಿ ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ತಿಳಿಸಿದ್ದಾರೆ.
ನಗರದ ತಹಸಿಲ್ದಾರ ಕಚೇರಿ ಮುಂಭಾಗದ ವಾರ್ಡ್ ಸಂಖ್ಯೆ 26ರಲ್ಲಿ ನಗರಸಭೆಯ 2023-24ನೇ ಸಾಲಿನ ಎಸ್‌ಬಿಎಂ 2.0 (ನಗರ) ಯೋಜನೆಯಡಿ ₹12 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಸಾರ್ವಜನಿಕ ಶೌಚಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ವನಕೇರಿ ಬಡಾವಣೆಯಲ್ಲಿ ಮತ್ತೊಂದು ₹12 ಲಕ್ಷ ವೆಚ್ಚದ ಶೌಚಾಲಯ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಿದರು.
ನಗರದಲ್ಲಿ ಸುಗಮ ವಾಹನ ಸಂಚಾರಕ್ಕಾಗಿ ರಸ್ತೆ ವಿಭಜಕ ತಡೆಗೋಡೆಗಳನ್ನು ನಿರ್ಮಿಸಲಾಗಿದೆ. ಹಲವೆಡೆ ಪ್ರಮುಖ ರಸ್ತೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಎಲ್ಲಾ ಭಾಗಗಳಲ್ಲಿ ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಸಲಾಗಿದೆ ಎಂದು ಹೇಳಿದರು.
ಮಳೆಗಾಲದಲ್ಲಿ ನೀರು ನಿಲ್ಲುವ ಸಮಸ್ಯೆ ನಿವಾರಣೆಗೆ ಒಳಚರಂಡಿ ವ್ಯವಸ್ಥೆ ಅತ್ಯಗತ್ಯವಾಗಿದೆ. ಇದಕ್ಕಾಗಿ ರಾಜ್ಯ ಬಜೆಟ್‌ನಲ್ಲಿ ₹287 ಕೋಟಿ ಅನುದಾನ ಮೀಸಲಿಡಲಾಗಿದೆ. ಮುಂದಿನ ದಿನಗಳಲ್ಲಿ ಗುಣಮಟ್ಟದ ಕಾಮಗಾರಿ ಮೂಲಕ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದರು.
ನಗರದಲ್ಲಿ ಉತ್ತಮ ಆರೋಗ್ಯ ಸೇವೆಗಾಗಿ ₹100 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಹತ್ತಿಕುಣಿ ಕ್ರಾಸ್‌ನಿಂದ ಚಾಮನಳ್ಳಿ ಕ್ರಾಸ್‌ವರೆಗೆ ₹5 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದ್ದು, ಕಾಮಗಾರಿ ಶೀಘ್ರ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.
ನಗರಕ್ಕೆ ಭೀಮಾ ನದಿಯಿಂದ ಶುದ್ಧ ಕುಡಿಯುವ ನೀರು ಪೂರೈಕೆ ಕಾಮಗಾರಿ ಪ್ರಗತಿಯಲ್ಲಿದ್ದು, ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಯೋಜನೆಯನ್ನು ವೇಗಗೊಳಿಸಲಾಗುವುದು ಎಂದು ಹೇಳಿದರು.
ಕೃಷಿ ಮಾರುಕಟ್ಟೆಯಲ್ಲಿ ರೈತರು ಮತ್ತು ವ್ಯಾಪಾರಿಗಳಿಗೆ ಅನುಕೂಲವಾಗಲು ₹4 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದರು.
ನಗರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಾರ್ವಜನಿಕ ಶೌಚಾಲಯಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ ಸುರೇಶ್ ಅಂಕಲಗಿ, ನಗರಸಭೆ ಆಯುಕ್ತ ಉಮೇಶ ಚವ್ಹಾಣ ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.










Leave a Reply