ಸುದ್ದಿ ಬೆಳಕು ವಾರ್ತೆ
ಯಾದಗಿರಿ: ರಾಜ್ಯಾದ್ಯಂತ ಇಂದು ನಡೆಯುತ್ತಿರುವ ಸಿವಿಲ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಹಿನ್ನೆಲೆಯಲ್ಲಿ ಯಾದಗಿರಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಗೂ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಯಾದಗಿರಿ ನಗರದ 19 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಪರೀಕ್ಷೆ ಆರಂಭವಾಗಿದ್ದು, ಯಾವುದೇ ಅಕ್ರಮ ಅಥವಾ ಗೊಂದಲಕ್ಕೆ ಅವಕಾಶವಾಗದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ವಿಶೇಷ ಮುನ್ನೆಚ್ಚರಿಕೆ ವಹಿಸಿದೆ.
ಬೆಳಗ್ಗೆಯಿಂದಲೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ್ದು, ಪ್ರತಿಯೊಬ್ಬ ಅಭ್ಯರ್ಥಿಯನ್ನು ಮೆಟಲ್ ಡಿಟೆಕ್ಟರ್ ಮೂಲಕ ತಪಾಸಣೆ ನಡೆಸಿದ ಬಳಿಕವೇ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ನೀಡಲಾಯಿತು. ಜೊತೆಗೆ ಅಭ್ಯರ್ಥಿಗಳ ಪ್ರವೇಶ ಪ್ರಕ್ರಿಯೆಯ ವಿಡಿಯೋ ಚಿತ್ರೀಕರಣ ಕೂಡ ನಡೆಸಲಾಯಿತು.
ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಿಗೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ನಿಯಮಾನುಸಾರ ಎಲೆಕ್ಟ್ರಾನಿಕ್ ವಸ್ತುಗಳನ್ನು ಹೊರಗೇ ಇಡುವಂತೆ ಸೂಚಿಸಲಾಗಿದ್ದು, ಸೂಕ್ತ ವ್ಯವಸ್ಥೆ ಇಲ್ಲದ ಕೆಲವು ಕೇಂದ್ರಗಳಲ್ಲಿ ಅಭ್ಯರ್ಥಿಗಳು ತಮ್ಮ ಬ್ಯಾಗ್ಗಳನ್ನು ಕೇಂದ್ರದ ಹೊರಭಾಗದಲ್ಲಿರುವ ಮರಗಳ ಕೆಳಗೆ ಇಟ್ಟು ಪರೀಕ್ಷೆಗೆ ಹಾಜರಾದ ದೃಶ್ಯಗಳು ಕಂಡುಬಂದವು.
ಪರೀಕ್ಷೆ ಪಾರದರ್ಶಕವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಯಲು ಪೊಲೀಸ್ ಇಲಾಖೆ, ಪರೀಕ್ಷಾ ಸಿಬ್ಬಂದಿ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಕೇಂದ್ರಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಯಾವುದೇ ಅಕ್ರಮಕ್ಕೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.












Leave a Reply