ತಕ್ಷಣ ಬರ ಪರಿಹಾರ ಕಾಮಗಾರಿ ಆರಂಭಿಸಿ: ಟಿ.ಎನ್. ಭೀಮುನಾಯಕ ಆಗ್ರಹ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ಬರ ಘೋಷಣೆ ಮಾಡುವ ಪ್ರಕ್ರಿಯೆಯಲ್ಲೇ ಕಾಲಹರಣ ಮಾಡದೆ, ಜಿಲ್ಲೆಯ ಸಂಕಷ್ಟದಲ್ಲಿರುವ ರೈತರ ನೆರವಿಗೆ ತಕ್ಷಣ ಧಾವಿಸಿ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ಸಾಕಷ್ಟು ವಿಳಂಬವಾಗಿದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ವಿಶೇಷ ಬರಗಾಲ ಪರಿಹಾರ ಪ್ಯಾಕೇಜ್ ಘೋಷಿಸಿ, ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬರ ಪರಿಹಾರ ಕಾಮಗಾರಿಗಳನ್ನು ಯುದ್ಧೋಪಾದಿಯಲ್ಲಿ ಕೈಗೆತ್ತಿಕೊಳ್ಳಬೇಕು. ವಿಬಿಜಿ ರಾಮ್‌ಜಿ ಯೋಜನೆಯಡಿ ಪ್ರಸ್ತುತ ನೀಡಲಾಗುತ್ತಿರುವ 120 ಮಾನವ ದಿನಗಳ ಉದ್ಯೋಗವನ್ನು 150 ದಿನಗಳಿಗೆ ಹೆಚ್ಚಿಸಿ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚಿನ ಉದ್ಯೋಗ ಒದಗಿಸಬೇಕು. ಜಿಲ್ಲೆಯ ನದಿಗಳಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ಕೆರೆಗಳನ್ನು ತುಂಬಿಸುವ ಮೂಲಕ ಜಾನುವಾರು ಹಾಗೂ ಜನರಿಗೆ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ರೈತರಿಗೆ ಸಾಲ ವಸೂಲಾತಿ ನೋಟಿಸ್ ನೀಡದಂತೆ ಹಾಗೂ ಸಾಲ ವಸೂಲಿಗೆ ಮುಂದಾಗದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಅಡಿಯಲ್ಲಿ ನೀಡಲಾಗುವ ಬರ ಪರಿಹಾರದ ಮೊತ್ತವನ್ನು ಪರಿಷ್ಕರಿಸಿ, ಕನಿಷ್ಠ ಮೂರು ಪಟ್ಟು ಹೆಚ್ಚಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿಯಮಾವಳಿಗಳನ್ನು ಸಮನ್ವಯಗೊಳಿಸಿ ಸಂಕಷ್ಟಕ್ಕೀಡಾದ ರೈತರಿಗೆ ಹೆಚ್ಚಿನ ಪರಿಹಾರ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಹಕಾರ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲವನ್ನು ಮನ್ನಾ ಮಾಡುವ ಕುರಿತು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕೈಗಾರಿಕೆಗಳಿಗೆ ಪೂರೈಸುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಮುಂದಿನ ಮಳೆಗಾಲದವರೆಗೆ ಕುಡಿಯುವ ನೀರಿನ ಅಗತ್ಯಕ್ಕಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆ ಉಂಟಾಗದಂತೆ ಕೂಡಲೇ ಗೋಶಾಲೆಗಳನ್ನು ಆರಂಭಿಸಬೇಕು. ಮೇವು ಬ್ಯಾಂಕ್‌ಗಳನ್ನು ಸ್ಥಾಪಿಸಬೇಕು. ಬೆಳೆ ವಿಮೆ ಕಂಪನಿಗಳಿಂದ ಅರ್ಹ ರೈತರಿಗೆ ವಿಮಾ ಪರಿಹಾರ ದೊರಕುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಸಮಸ್ಯೆ ನಿವಾರಿಸಲು ಅಗತ್ಯವಿದ್ದಲ್ಲಿ ಬೇರೆಡೆಯಿಂದ ವಿದ್ಯುತ್ ಖರೀದಿಸಿ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಹೇಳಿದ್ದಾರೆ.

ಬರದಿಂದ ರೈತರು ತೀವ್ರ ಆರ್ಥಿಕ ಹಾಗೂ ಮಾನಸಿಕ ಸಂಕಷ್ಟಕ್ಕೆ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗದಂತೆ ಸರ್ಕಾರ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಂಡು ರೈತರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು. ಪಕ್ಷಭೇದ ಮರೆತು ಜಿಲ್ಲೆಯ ಎಲ್ಲ ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಿ ಪರಿಹಾರ ಮೊತ್ತ ಬಿಡುಗಡೆ ಹಾಗೂ ರೈತರ ಸಾಲ ಮನ್ನಾಕ್ಕೆ ಧ್ವನಿ ಎತ್ತಬೇಕು ಎಂದು ಭೀಮುನಾಯಕ ಮನವಿ ಮಾಡಿದ್ದಾರೆ.

ತಕ್ಷಣ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರ ಹೋರಾಟ ರೂಪಿಸಲಾಗುವುದು ಎಂದು ಮಲ್ಲು ಮಾಳಿಕೇರಿ, ಸಿದ್ದು ನಾಯಕ ಹತ್ತಿಕುಣಿ, ಅಂಬ್ರೇಷ್ ಹತ್ತಿಮನಿ, ನಿಂಗಪ್ಪ ಗುಡಗುಡಿ, ಭೀಮಾಶಂಕರ ಹತ್ತಿಕುಣಿ, ವಿಶ್ವರಾಜ ಪಾಟೀಲ್ ಹೊನಗೇರಾ, ಭೀಮರಾಯ ರಾಮಸಮುದ್ರ, ಸಿದ್ದಪ್ಪ ಕುಯಿಲೂರ, ಸಿದ್ದಪ್ಪ ಕ್ಯಾಸಪನಳ್ಳಿ, ಕಾಶಿನಾಥ ನಾನೇಕ, ಅಶೋಕ ನಾಯಕ, ಮರೆಪ್ಪ ಕಡ್ಡಿ ಹಾಗೂ ರಮೇಶ ಡಿ. ನಾಯಕ ಎಚ್ಚರಿಸಿದ್ದಾರೆ.

You Might Also Like

Leave a Reply

Your email address will not be published. Required fields are marked *

Suddi Belaku