ಯಾದಗಿರಿಯ ಡಿಡಿಯು ಸಿಬಿಎಸ್‌ಇ ಶಾಲೆಯಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ

Posted by

–

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ನಗರದ ಡಿಡಿಯು ಸಿಬಿಎಸ್‌ಇ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜನ್ಮದಿನ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಗೌರವ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.

ಶಾಲೆಯ ಇಕೋ ಕ್ಲಬ್ ವತಿಯಿಂದ ಸ್ವಚ್ಛ ಭಾರತ ಅಭಿಯಾನದ ಆಶಯದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಮಲ್ಲಿಕಾರ್ಜುನ ಮೆಟಿ, ಪಿಯು ಕಾಲೇಜಿನ ಪ್ರಾಂಶುಪಾಲ ಗೋಪಾಲ್ ಕೃಷ್ಣನ್, ಡಿಡಿಯು ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲ ಬಾಬಿನ್ ರಾಜ್, ವ್ಯವಸ್ಥಾಪಕ ರಾಜಶೇಖರ್, ಪುರುಷರ ವಸತಿ ನಿಲಯದ ವಾರ್ಡನ್ ನಿಂಗಣ್ಣ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಪುಷ್ಪನಮನ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಮೆಟಿ, ಗಾಂಧೀಜಿ ಅವರ ಜೀವನ, ಸ್ವಾತಂತ್ರ್ಯ ಹೋರಾಟ ಹಾಗೂ ದೇಶಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಸತ್ಯ, ಅಹಿಂಸೆ, ಸರಳತೆ, ಶಿಸ್ತು ಮತ್ತು ಸೇವಾ ಮನೋಭಾವದಂತಹ ಗಾಂಧೀಜಿ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರಾಂಶುಪಾಲ ಬಾಬಿನ್ ರಾಜ್ ಮಾತನಾಡಿ, ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನಾದರ್ಶಗಳು ವಿದ್ಯಾರ್ಥಿಗಳಿಗೆ ಸದಾ ಪ್ರೇರಣೆಯಾಗಬೇಕು. ಸ್ವಚ್ಛತೆ, ಶಿಸ್ತು, ಜವಾಬ್ದಾರಿ ಹಾಗೂ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಸ್ವಚ್ಛತೆ ಒಂದು ದಿನದ ಆಚರಣೆಗೆ ಸೀಮಿತವಾಗದೆ ದೈನಂದಿನ ಜೀವನದ ಭಾಗವಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ, ಪರಿಸರ ಕಾಳಜಿ, ದೇಶಭಕ್ತಿ ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸಲಾಯಿತು.

Leave a Reply

Your email address will not be published. Required fields are marked *

↑
Suddi Belaku